ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಧಿಕಾರ ಕಳೆದುಕೊಳ್ಳುವ ಭೀತಿಯಿಂದ ಜಾತಿ ಗಣತಿ ಬಿಡುಗಡೆ ಮಾಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮೊದಲು ಅದನ್ನು ಬಹಿರಂಗ ಪಡೆಸಲಿ. ಸಾರ್ವಜನಿಕ ಚರ್ಚೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವಿಚಾರವಾಗಿ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರನ್ನು ಭೇಟಿ ಮಾಡಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಇದು ಜಾತಿ ಗಣತಿ ಅಲ್ಲ. ಸಾಮಾಜಿಕ-ಆರ್ಥಿಕ ಸಮೀಕ್ಷೆ ಪ್ರಕಾರ ಜಾತಿ ಗಣತಿ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಜಾತಿ ಗಣತಿ ನಡೆಸುವ ಅಧಿಕಾರ ಕೇಂದ್ರ ಸರಕಾರಕ್ಕೆ ಮಾತ್ರ ಇದೆ. ಬಿಹಾರ ಸರ್ಕಾರದ ಜಾತಿ ಗಣತಿಗೂ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಇವರು ಯಾವುದೋ ಸಮೀಕ್ಷೆ ಮಾಡಿ ಅದಕ್ಕೆ ಜಾತಿ ಜನಗಣತಿಯ ಲೇಪನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.