ಹೊಸದಿಗಂತ ಡಿಜಿಟಲ್ ಡೆಸ್ಕ್;
ಭಾರೀ ಮಳೆಯಿಂದ ಉಂಟಾದ ಪ್ರವಾಹಕ್ಕೆ ನಲುಗಿ ಹೋಗಿರುವ ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಕೇಂದ್ರ ಸರ್ಕಾರ ಭಾರಿ ನೆರವು ಘೋಷಿಸಿದೆ. ವಿಪತ್ತು ನಿರ್ವಹಣಾ ನಿಧಿಯಿಂದ ಕೇಂದ್ರವು 3,448 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಘೋಷಿಸಿದೆ.
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಾತನಾಡಿ, ತಕ್ಷಣದ ನೆರವು ನೀಡುವ ಪ್ರಕ್ರಿಯೆ ನಡೆಯುತ್ತಿದ್ದು, ತ್ವರಿತವಾಗಿ ಎರಡೂ ರಾಜ್ಯಗಳ ಪ್ರವಾಹ ಪರಿಹಾರ ಕಾರ್ಯಕ್ರಮಗಳಿಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಶಿವರಾಜ್ ಸಿಂಗ್ ಚೌಹಾಣ್ ಅವರು ಶುಕ್ರವಾರ (ಸೆ.6) ಆಂಧ್ರ ಮತ್ತು ತೆಲಂಗಾಣದಲ್ಲಿ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸಿದರು. ಸಾರ್ವಜನಿಕರು ಮತ್ತು ರೈತರನ್ನು ಭೇಟಿ ಮಾಡಿ ಸಮಸ್ಯೆಗಳ ಕುರಿತು ಚರ್ಚಿಸಿದರು. ಚಂದ್ರಬಾಬು ನಾಯ್ಡು ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ದಕ್ಷತೆಯಿಂದ ಕೆಲಸ ಮಾಡುತ್ತಿದೆ ಎಂದು ಪ್ರತಿಕ್ರಿಯಿಸಿದರು. ಆಂಧ್ರಪ್ರದೇಶಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.