ರಾಜ್ಯ ಸರಕಾರದಿಂದ ಪೌರಕಾರ್ಮಿಕರಿಗೆ ಸಿಕ್ಕಿತು ಗುಡ್ ನ್ಯೂಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ರಾಜ್ಯದಲ್ಲಿ ಬಿಬಿಎಂಪಿ ಹಾಗೂ ಇತರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂಗೊಳಿಸಲು ಸರ್ಕಾರದ ತಾತ್ವಿಕ ಒಪ್ಪಿಗೆ ನೀಡಿದೆ.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪೌರಕಾರ್ಮಿಕರ ಸಮಸ್ಯೆಗಳನ್ನು ಚರ್ಚಿಸಲು ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಸಿಎಂ, ಕಾನೂನುಬದ್ಧವಾಗಿ ಜಾರಿಗೊಳಿಸಲು ಸರ್ಕಾರದ ಹಿರಿಯ ಅಧಿಕಾರಿಗಳು, ಕಾನೂನು ಇಲಾಖೆ ಹಾಗೂ ಪೌರ ಕಾರ್ಮಿಕರ ಪ್ರತಿನಿಧಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗುವುದುಎಂದು ತಿಳಿಸಿದರು. ಜೊತೆಗೆ ಈ ಸಮಿತಿಯು ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದರು.

ಪೌರಕಾರ್ಮಿಕರಿಗೆ ಸಾಮಾಜಿಕವಾಗಿ ಗೌರವ, ಸೌಲಭ್ಯ ಹಾಗೂ ಸುರಕ್ಷತೆ ಅಗತ್ಯ ಎನ್ನುವುದು ಸರ್ಕಾರಕ್ಕೆ ಮನವರಿಕೆಯಾಗಿದೆ. ಸರ್ಕಾರವು ಪೌರಕಾರ್ಮಿಕರ ಸಮಸ್ಯೆಗಳಿಗೆ ಮಾನವೀಯತೆಯಿಂದ ಸ್ಪಂದಿಸಲಿದೆ. ಈ ಉದ್ದೇಶದಿಂದಲೇ ಆಯವ್ಯಯದಲ್ಲಿ ಪೌರಕಾರ್ಮಿಕರಿಗೆ ಮಾಸಿಕ 2000 ರೂ. ಸಂಕಷ್ಟ ಭತ್ಯೆ ಘೋಷಿಸಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ ಎಂದು ತಿಳಿಸಿದರು.

ಪೌರಕಾರ್ಮಿಕರ ನೇಮಕಾತಿ ಸರಳೀಕರಣಗೊಳಿಸಲು ವಿಶೇಷ ನೇಮಕಾತಿ ನಿಯಮಗಳನ್ನು ರೂಪಿಸಲಾಗುವುದು ಹಾಗೂ ನೇಮಕಾತಿ ನೀತಿಯನ್ನೂ ಜಾರಿಗೆ ತರಲಾಗುವುದು. ಈ ಸಂದರ್ಭದಲ್ಲಿ ಐ.ಪಿ.ಡಿ. ಸಾಲಪ್ಪ ವರದಿ, ಚಂದ್ರಶೇಖರ್ ಸಮಿತಿ ವರದಿ ಹಾಗೂ ರಾಷ್ಟ್ರೀಯ ಕಾನೂನು ಶಾಲೆಯ ವರದಿಗಳನ್ನು ಪರಿಗಣಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಬೇರೆ ರಾಜ್ಯಗಳಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳ ಮಾಹಿತಿಯನ್ನೂ ಪಡೆಯಲು ಸೂಚಿಸಿದರು.

ಪೌರಕಾರ್ಮಿಕರಿಗೆ ಪ್ರತ್ಯೇಕವಾಗಿ ಗೃಹಭಾಗ್ಯ ಯೋಜನೆ ಜಾರಿಗೊಳಿಸಲು ಹೊಸದಾಗಿ ಮಂಜೂರಾತಿ ನೀಡಲಾಗುವುದು. ಪೌರಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ರೈತವಿದ್ಯಾನಿಧಿ ಮಾದರಿಯಲ್ಲಿ ವಿದ್ಯಾರ್ಥಿ ವೇತನ ನೀಡಲಾಗುವುದು. ಪೌರಕಾರ್ಮಿಕ ಮಹಿಳೆಯರಿಗೆ ಸರ್ಕಾರಿ ನೌಕರರಿಗೆ ನೀಡುವಂತೆ ಹೆರಿಗೆ ಸೌಲಭ್ಯಗಳನ್ನು ವಿಸ್ತರಿಸಲಾಗುವುದು.ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ, ಶೌಚಾಲಯ ಸೌಲಭ್ಯ ಒದಗಿಸಬೇಕು. ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರತಿ ವಾರ್ಡ್‍ನಲ್ಲಿ ಒಂದು ಅಥವಾ ಎರಡು ವಿಶ್ರಾಂತಿ ಕೊಠಡಿಗಳನ್ನು ನಿರ್ಮಿಸಲು ಸೂಚಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!