March 14, 2026
Saturday, March 14, 2026
spot_img

ವಿಶ್ವವಿಖ್ಯಾತ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವಕ್ಕೆ ಮೇಲುಕೋಟೆಯಲ್ಲಿ ದಿನಗಣನೆ ಶುರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ಜಿಲ್ಲೆಯ ವಿಶ್ವವಿಖ್ಯಾತ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಇದೇ ತಿಂಗಳ 23ರಿಂದ ಏಪ್ರಿಲ್ 4ರವರೆಗೆ ನಡೆಯಲಿದ್ದು, ಉತ್ಸವದ ಪ್ರಮುಖ ಆಕರ್ಷಣೆಯಾದ ವೈರಮುಡಿ ಕಿರೀಟಧಾರಣೆಯು ಮಾರ್ಚ್ 28ರಂದು ಜರುಗಲಿದೆ.
ಈ ಹಿನ್ನೆಲೆಯಲ್ಲಿ ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮವಹಿಸಬೇಕೆಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇಂದು ಮೇಲುಕೋಟೆಯಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವೈರಮುಡಿ ಉತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಆದ್ದರಿಂದ ಕುಡಿಯುವ ನೀರು ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಯಾವುದೇ ಗೊಂದಲಗಳಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು. ಪೊಲೀಸ್ ಇಲಾಖೆಯು ಅತ್ಯಂತ ಸಂಯಮ ಮತ್ತು ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ ಮಾತನಾಡಿ, ಉತ್ಸವಕ್ಕೆ ಬರುವ ಸಾರ್ವಜನಿಕರಿಗೆ ಮೂಲಸೌಕರ್ಯಗಳ ಕೊರತೆಯಾಗದಂತೆ ನಿಗಾ ವಹಿಸಬೇಕು ಎಂದರು. ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಸಭೆಗೆ ಮಾಹಿತಿ ನೀಡಿ, ಈಗಾಗಲೇ ಅಧಿಕಾರಿಗಳೊಂದಿಗೆ ಸಮನ್ವಯ ಸಭೆ ನಡೆಸಲಾಗಿದ್ದು, ಕುಡಿಯುವ ನೀರು, ಶೌಚಾಲಯ ಮತ್ತು ವಾಹನ ನಿಲುಗಡೆಗೆ (ಪಾರ್ಕಿಂಗ್) ಸೂಕ್ತ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !