September 23, 2026
Wednesday, September 23, 2026
spot_img

ನಿಮ್ಮ ಮನೆಯ ಮಗಳು, ನಿಮ್ಮ ಸೇವೆಗೆ ಸದಾ ಸಿದ್ಧ ಅಂತಿದ್ರಲ್ಲಾ, ರಸ್ತೆ ಸಂಪೂರ್ಣ ಹದಗೆಟ್ಟಿದೆ ನೋಡಿಬನ್ನಿ!!

ಹೊಸದಿಗಂತ ವರದಿ ಬೆಳಗಾವಿ:

ತಾಲೂಕಿನ ಮೋದಗಾ ಗ್ರಾಮದಿಂದ ಹಿರೇಬಾಗೇವಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ವಾಹನ ಸವಾರರು ನಿತ್ಯವೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯುದ್ದಕ್ಕೂ ಬೃಹತ್ ಗಾತ್ರದ ಗುಂಡಿಗಳು ನಿರ್ಮಾಣವಾಗಿದ್ದು, ವಾಹನಗಳನ್ನು ಪಾರು ಮಾಡಿಕೊಂಡು ಸಂಚರಿಸುವುದು ಸವಾರರಿಗೆ ಸವಾಲಾಗಿ ಪರಿಣಮಿಸಿದೆ.

ಮೋದಗಾ ಗ್ರಾಮದಿಂದ ಏರಿ ಗುಡ್ಡದವರೆಗೆ ರಸ್ತೆ ಅಭಿವೃದ್ಧಿಪಡಿಸಲಾಗಿದ್ದರೂ, ಏರಿ ಗುಡ್ಡದ ಬಳಿ ರಸ್ತೆ ಸಂಪೂರ್ಣವಾಗಿ ಹಾಳಾಗಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ಹೋರಹಾಕುತ್ತಿದ್ದಾರೆ. ವಾಹನ ಸವಾರರು ಗುಂಡಿಗಳಿಂದ ತಪ್ಪಿಸಿಕೊಂಡು ಸಂಚರಿಸುವಾಗ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ತೆರಳುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಶುಕ್ರವಾರದಂದು ಏರಿ ಗುಡ್ಡದ ಬಳಿ ಬೃಹತ್ ಗಾತ್ರದ ಲಾರಿಯೊಂದು ರಸ್ತೆ ಗುಂಡಿಯಲ್ಲಿ ಸಿಲುಕಿಕೊಂಡು ಅಪಾಯದ ಸ್ಥಿತಿಗೆ ತಲುಪಿದೆ. ಲಾರಿ ಗುಂಡಿಯಲ್ಲಿ ಸಿಲುಕಿದ ಸಂದರ್ಭದಲ್ಲಿ ಚಾಲಕ ಅಪಾಯವನ್ನು ಅರಿತು ಲಾರಿಯಿಂದ ಹಾರಿ ತನ್ನ ಪ್ರಾಣವನ್ನು ಉಳಿಸಿಕೊಂಡಿದ್ದಾನೆ ಎನ್ನಲಾಗಿದೆ. ಈ ಘಟನೆ ಬಳಿಕ ಸ್ಥಳೀಯರು ರಸ್ತೆಯ ದುಸ್ಥಿತಿಯ ಬಗ್ಗೆ ಮತ್ತಷ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಜನತೆಗೆ “ನಿಮ್ಮ ಮನೆಯ ಮಗಳು, ನಿಮ್ಮ ಸೇವೆಗೆ ಸದಾ ಸಿದ್ಧ” ಎಂದು ಹೇಳುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರೇ, ಮೋದಗಾ–ಹಿರೇಬಾಗೇವಾಡಿ ಸಂಪರ್ಕ ರಸ್ತೆಯ ಈ ದುಸ್ಥಿತಿ ಇದೇನಾ ನಿಮ್ಮ ಅಭಿವೃದ್ಧಿ? ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ರಸ್ತೆಯ ದುಸ್ಥಿತಿಯಿಂದ ಮೋದಗಾ ಗ್ರಾಮಸ್ಥರು ಮಾತ್ರವಲ್ಲದೆ, ಇದೇ ಮಾರ್ಗವಾಗಿ ನಿತ್ಯ ಸಂಚರಿಸುವ ಸುತ್ತಮುತ್ತಲಿನ ಗ್ರಾಮಗಳ ಜನರೂ ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಮ ಪಂಚಾಯಿತಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೂಡಲೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ರಸ್ತೆ ದುರಸ್ತಿ ಕಾರ್ಯವನ್ನು ತಕ್ಷಣ ಕೈಗೊಳ್ಳದಿದ್ದರೆ ಶಾಸಕಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !