Sunday, January 11, 2026

ಮಳವಳ್ಳಿಯಲ್ಲಿ ಶಿವರಾತ್ರೀಶ್ವರರ ವೈಭವ: ಜಯಂತಿ ಮಹೋತ್ಸವಕ್ಕೆ ರಾಷ್ಟ್ರಪತಿ ಮುರ್ಮು ಚಾಲನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ಮಳವಳ್ಳಿ ಪಟ್ಟಣದಲ್ಲಿ ನಡೆಯಲಿರುವ ಐತಿಹಾಸಿಕ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸುತ್ತೂರು ಮಠಾಧೀಶರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ನೇತೃತ್ವದಲ್ಲಿ ಶಾಂತಿ ಕಾಲೇಜು ಮುಂಭಾಗದ 30 ಎಕರೆ ಪ್ರದೇಶದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆದಿವೆ. ಇಂದಿನಿಂದ ಆರಂಭಗೊಂಡು ಡಿ.22ರವರೆಗೆ, ಏಳು ದಿನಗಳ ಕಾಲ ಈ ಮಹೋತ್ಸವವು ಅದ್ದೂರಿಯಾಗಿ ನಡೆಯಲಿದೆ.

ರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ಮಳವಳ್ಳಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಡಿ.14 ರಂದೇ ಭದ್ರತಾ ಪಡೆ ಅಧಿಕಾರಿಗಳು ಮಾರೆಹಳ್ಳಿ ಬಳಿ ನಿರ್ಮಿಸಲಾಗಿರುವ ಹೆಲಿಪ್ಯಾಡ್‌ನಲ್ಲಿ ಹೆಲಿಕಾಪ್ಟರ್ ಅಣಕು ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಿದ್ದರು.

ಜಯಂತಿ ಮಹೋತ್ಸವಕ್ಕೆ ಆಗಮಿಸುವ ಗಣ್ಯರು ಮತ್ತು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಮಹತ್ವದ ಸೂಚನೆ ನೀಡಿದ್ದಾರೆ. ತಾಲೂಕು ಆಸ್ಪತ್ರೆ ಮತ್ತು ಪ್ರವಾಸಿ ಮಂದಿರದಲ್ಲಿ 24 ಗಂಟೆಗಳ ಕಾಲ ಆರೋಗ್ಯ ಸಿಬ್ಬಂದಿ ಲಭ್ಯವಿರಬೇಕು ಮತ್ತು ತುರ್ತು ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಡಾ. ಸಂಜಯ್ ಮತ್ತು ತಾಲೂಕು ವೈದ್ಯಾಧಿಕಾರಿ ಡಾ. ವೀರಭದ್ರಪ್ಪ ಅವರಿಗೆ ಸೂಚನೆ ನೀಡಲಾಗಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸಚಿವ ಚಲುವರಾಯಸ್ವಾಮಿ, ಶಾಸಕ ನರೇಂದ್ರಸ್ವಾಮಿ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಮತ್ತು ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!