ಹೈಕೋರ್ಟ್ ತೀರ್ಪನ್ನು ಒಪ್ಪಿಕೊಂಡು ಶಾಂತಿ ಸುವ್ಯವಸ್ಥೆ ಕಾಪಾಡಬೇಕು: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಮಕ್ಕಳಿಗೆ ವಿದ್ಯೆಗಿಂತ ಮುಖ್ಯ ಮತ್ತೊಂದಿಲ್ಲ. ಹಿಜಾಬ್ ನಿರ್ಬಂಧ ಹಿನ್ನೆಲೆಯಲ್ಲಿ ಹೈಕೋರ್ಟಿನ ತ್ರಿಸದಸ್ಯ ಪೀಠ ಕೊಟ್ಟಿರುವ ತೀರ್ಪನ್ನು ನಾವೆಲ್ಲರೂ ಪಾಲಿಸಬೇಕು. ಅದನ್ನು ಅನುಷ್ಠಾನಿಸುವ ಹಿನ್ನೆಲೆಯಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಹಿಜಾಬ್ ಇಸ್ಲಾಂನಲ್ಲಿ ಅತ್ಯಗತ್ಯ ಹಕ್ಕು ಅಲ್ಲ ಎಂಬುದನ್ನು ಹೇಳಿದೆ ಎಂದರು.

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಇರುವುದು ಬಹಳ ಮುಖ್ಯ. ಆದ್ದರಿಂದ ಎಲ್ಲರೂ ಶಾಂತಿ ಕಾಪಾಡಬೇಕು. ಸಮಸ್ತ ಎಲ್ಲ ಜನತೆ, ಎಲ್ಲ ಸಮುದಾಯದ ನಾಯಕರು, ಎಲ್ಲ ಪಾಲಕರು, ಶಿಕ್ಷಕರಲ್ಲಿ ಕಳಕಳಿಯ ವಿನಂತಿ ಮಾಡುತ್ತಿದ್ದೇನೆ, ಈ ತೀರ್ಪನ್ನು ನಾವೆಲ್ಲರೂ ಒಪ್ಪಿಕೊಂಡು ಶಾಂತಿ, ಸುವ್ಯವಸ್ಥೆ ಕಾಪಾಡಬೇಕು. ತೀರ್ಪಿನ ಅನ್ವಯ ಮಕ್ಕಳಿಗೆ ಶಿಕ್ಷಣ ನೀಡುವುದಕ್ಕೆ ಎಲ್ಲರೂ ಸಹಕರಿಸಬೇಕೆಂದು ಸಿಎಂ ಹೇಳಿದರು.

ಎಲ್ಲ ವಿದ್ಯಾರ್ಥಿಗಳು ಹೈಕೋರ್ಟಿನ ಆದೇಶವನ್ನು ಪಾಲನೆ ಮಾಡಿ, ಶಿಕ್ಷಣ ಮುಂದುವರಿಸಬೇಕು. ತರಗತಿಗಳಿಂದ ಅಥವಾ ಪೂರ್ವಭಾವಿ ಪರೀಕ್ಷೆಯಂತೆ ಅಂತಿಮ ಪರೀಕ್ಷೆಗಳನ್ನು ಬಹಿಷ್ಕರಿಸುವ ಪ್ರಯತ್ನ ಮಾಡಬಾರದು. ಎಲ್ಲರೂ ತರಗತಿಗಳು, ಪರೀಕ್ಷೆಗಳಿಗೆ ಹಾಜರಾಗಬೇಕು. ನಿಮ್ಮ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ನಿರ್ಮಿಸಲು ಚಿಂತನೆ ಮಾಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಾನೂನು ಸುವ್ಯವಸ್ಥೆಗೆ ನಾವು ಬಂದೋಬಸ್ತ್ ನಿಯೋಜನೆ ಮಾಡಿದ್ದೇವೆ. ಹೈಕೋರ್ಟ್ ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಕಾನೂನು ಸುವ್ಯವಸ್ಥೆಗೆ ವ್ಯತಿರಿಕ್ತವಾಗಿ ನಡೆದರೆ, ನಮ್ಮ ಗೃಹ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here