ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ಮದ್ಯದ ಮೇಲಿನ ತೆರಿಗೆ ವಿಧಿಸುವ ಪದ್ಧತಿಯಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಪಾನೀಯಗಳಲ್ಲಿರುವ ಅಮಲೇರಿಸುವ ಅಂಶದ ಆಧಾರದ ಮೇಲೆ ತೆರಿಗೆ ವಿಧಿಸುವ ಹೊಸ ವ್ಯವಸ್ಥೆಯನ್ನು ಸರ್ಕಾರ ಘೋಷಿಸಿದೆ.
ಜಾಗತಿಕ ಮಟ್ಟದಲ್ಲಿ ಅನುಸರಿಸಲಾಗುವ ಅತ್ಯಾಧುನಿಕ ‘ಗೋಲ್ಡ್ ಸ್ಟ್ಯಾಂಡರ್ಡ್’ ಮಾದರಿಯನ್ನು ಸರ್ಕಾರ ಅಳವಡಿಸಿಕೊಳ್ಳುತ್ತಿದೆ. ಈ ಹಿಂದೆ ಬೇರೆಯದೇ ಮಾನದಂಡಗಳಿದ್ದವು, ಆದರೆ ಇನ್ಮುಂದೆ ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣಕ್ಕೆ ಅನುಗುಣವಾಗಿ ಅಬಕಾರಿ ಸುಂಕವನ್ನು ಲೆಕ್ಕ ಹಾಕಲಾಗುತ್ತದೆ.
ಈ ಹೊಸ ವ್ಯವಸ್ಥೆಯು ಏಪ್ರಿಲ್ 2026 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ತೆರಿಗೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಜಾಗತಿಕ ಗುಣಮಟ್ಟವನ್ನು ಕಾಪಾಡುವುದು ಇದರ ಪ್ರಮುಖ ಗುರಿಯಾಗಿದೆ.
ಕೇವಲ ಆದಾಯವನ್ನಷ್ಟೇ ಗಮನಿಸದ ಸರ್ಕಾರ, ಮಾದಕ ವ್ಯಸನಕ್ಕೆ ಬಲಿಯಾಗುತ್ತಿರುವ ಯುವಜನಾಂಗವನ್ನು ರಕ್ಷಿಸಲು ಮುಂದಾಗಿದೆ. ಇದಕ್ಕಾಗಿ ಪ್ರಮುಖ ಆರೋಗ್ಯ ಸಂಸ್ಥೆಗಳಲ್ಲಿ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಘೋಷಿಸಿದೆ.
ಬೆಂಗಳೂರಿನ ನಿಮ್ಹಾನ್ಸ್ (NIMHANS) ಹಾಗೂ ಧಾರವಾಡದ ಮಾನಸಿಕ ಆರೋಗ್ಯ ಸಂಸ್ಥೆಗಳಲ್ಲಿ ಈ ವಿಶೇಷ ಕೇಂದ್ರಗಳು ಸ್ಥಾಪನೆಯಾಗಲಿವೆ.
ವಿಶೇಷವಾಗಿ 18 ವರ್ಷದೊಳಗಿನ ಮಕ್ಕಳು ಮಾದಕ ವ್ಯಸನಕ್ಕೆ ತುತ್ತಾಗುತ್ತಿರುವುದನ್ನು ತಡೆಯಲು ಪ್ರಾಯೋಗಿಕವಾಗಿ ಈ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ.



