ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ಮುಂದಿನ ಬೆಳವಣಿಗೆಯ ಕುರಿತು ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯೂ ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಬೆಂಗಳೂರು ನಗರವಾಗಿ ರೂಪುಗೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆಗೆ ಸಂಬಂಧಿಸಿದ 11ರಿಂದ 12 ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. “ಮುಂದಿನ ದಿನಗಳಲ್ಲಿ ಬೆಂಗಳೂರು ಇನ್ನಷ್ಟು ಬೆಳೆಯಲಿದೆ. ಬಿಎಂಆರ್‌ಡಿಎ ವ್ಯಾಪ್ತಿಯೂ ಇಂದಲ್ಲ ನಾಳೆ ಬೆಂಗಳೂರು ಆಗುತ್ತದೆ. ಈ ನಿಟ್ಟಿನಲ್ಲಿ ನಾನು ಹಲವಾರು ಡೈರೆಕ್ಷನ್‌ಗಳನ್ನು ನೀಡಿದ್ದೇನೆ” ಎಂದು ಡಿಸಿಎಂ ಶಿವಕುಮಾರ್ ತಿಳಿಸಿದರು.
ಸಭೆಯಲ್ಲಿ ಚರ್ಚಿಸಿದ ಪ್ರಮುಖ ಅಂಶಗಳ ಕುರಿತು ಮಾತನಾಡಿದ ಅವರು, ಯಾವುದೇ ಅಭಿವೃದ್ಧಿ ಕಾರ್ಯಗಳು “ಮೊದಲೇ ಪ್ಲ್ಯಾನಿಂಗ್ ಸರಿಯಾಗಿ ಇರಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು. ನಗರದ ಭವಿಷ್ಯದ ವಿಸ್ತರಣೆಯನ್ನು ಗಮನದಲ್ಲಿಟ್ಟುಕೊಂಡು ಒಂದು ಸಮಗ್ರವಾದ ‘ಹೊಸ ಮಾಸ್ಟರ್ ಪ್ಲ್ಯಾನ್’ ಅನ್ನು ತಯಾರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಬೆಂಗಳೂರಿನ ಪ್ರಾದೇಶಿಕ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ದಿಕ್ಕನ್ನು ನೀಡುವ ಇಂಗಿತವನ್ನು ಅವರು ವ್ಯಕ್ತಪಡಿಸಿದ್ದಾರೆ.

