ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘45’ ಸಿನಿಮಾ ಬಿಡುಗಡೆಗೊಂಡ ಕೆಲವೇ ಗಂಟೆಗಳಲ್ಲಿ ಪೈರಸಿ ಸಮಸ್ಯೆ ಎದುರಾಗಿದೆ. ಡಿಸೆಂಬರ್ 25ರಂದು ರಾಜ್ಯಾದ್ಯಂತ ತೆರೆಕಂಡಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದಂತೆ, ಅಕ್ರಮವಾಗಿ ಸಿನಿಮಾ ಲಿಂಕ್‌ಗಳು ಹರಿದಾಡುತ್ತಿರುವುದು ನಿರ್ಮಾಪಕರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿದ ನಿರ್ಮಾಪಕ ರಮೇಶ್ ರೆಡ್ಡಿ, ಪೈರಸಿ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಸ್ಪಷ್ಟಪಡಿಸಿದ್ದಾರೆ.
ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಅಭಿನಯದ ‘45’ ಸಿನಿಮಾ ಬಹುತೇಕ ಚಿತ್ರಮಂದಿರಗಳಲ್ಲಿ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಬಿಡುಗಡೆಗೊಂಡ 24 ಗಂಟೆಯೊಳಗೆ ಪೈರಸಿ ಲಿಂಕ್‌ಗಳು ಕಾಣಿಸಿಕೊಳ್ಳುತ್ತಿರುವುದು ಬೇಸರ ತಂದಿದೆ ಎಂದು ರಮೇಶ್ ರೆಡ್ಡಿ ಹೇಳಿದ್ದಾರೆ. ಈಗಾಗಲೇ ಮೂರು ನಾಲ್ಕು ಪೈರಸಿ ಲಿಂಕ್‌ಗಳನ್ನು ಡಿಲೀಟ್ ಮಾಡಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:
ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಉದ್ದೇಶದಿಂದ ದೊಡ್ಡ ಬಜೆಟ್‌ನಲ್ಲಿ ಈ ಸಿನಿಮಾ ನಿರ್ಮಿಸಲಾಗಿದೆ. ಗರುಡ ಪುರಾಣದ ತತ್ವಾಧಾರಿತ ಕಥೆ ಎಲ್ಲರಿಂದ ಮೆಚ್ಚುಗೆ ಪಡೆದಿದ್ದರೂ, ಪೈರಸಿ ನಡೆಯುತ್ತಿರುವುದು ದುಃಖಕರ ಸಂಗತಿ ಎಂದು ನಿರ್ಮಾಪಕರು ತಿಳಿಸಿದ್ದಾರೆ. ಪೈರಸಿ ಅಥವಾ ನೆಗೆಟಿವ್ ಪ್ರಚಾರ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೋರ್ಟ್ ಆದೇಶವೂ ಪಡೆದಿದ್ದೇವೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

