ಕಳೆದ 11 ವರ್ಷದಲ್ಲಿ ದೇಶದ ಬುಡಕಟ್ಟು ಶಾಲೆಗಳ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಳ!

ಹೊಸ ದಿಗಂತ ಡಿಜಿಟಲ್‌ಡೆಸ್ಕ್:
ಕಳೆದ 11 ವರ್ಷಗಳಲ್ಲಿ ದೇಶದ ಎಲ್ಲಾ ವಲಯಗಳಲ್ಲಿ ಅಭೂತಪೂರ್ವ ಪ್ರಗತಿ ಕಂಡಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ದಕ್ಷ ನಾಯಕತ್ವದಲ್ಲಿ ಕೇಂದ್ರದ ಜನಪರ ಯೋಜನೆಗಳು ಫಲಾನುಭವಿಗಳಿಗೆ ಸಕಾಲದಲ್ಲಿ ಪಾರದರ್ಶಕ ಮಾದರಿಯಲ್ಲಿ ತಲುಪುತ್ತಿವೆ ಎಂದರು. ಹರ್‌ಘರ್ ಜಲ್ ಯೋಜನೆಯಡಿ ಸುಮಾರು 15 ಕೋಟಿಗೂ ಹೆಚ್ಚು ಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಕೊಳವೆ ಮೂಲಕ ಒದಗಿಸಲಾಗಿದೆ. ಉಜ್ವಲ ಯೋಜನೆಯಡಿ 10.33 ಕೋಟಿ ಸಬ್ಸಿಡಿ ಸಹಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗಿದೆ. ಸೌಭಾಗ್ಯ ಯೋಜನೆಯಡಿ 11 ಕೋಟಿಗೂ ಹೆಚ್ಚು ಮನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲಾಗಿದ್ದು, ಆ ಮೂಲಕ ದೇಶದಲ್ಲಿ ಎಲ್ಲ ಮನೆಗಳಿಗೆ ಶೇಕಡ 100ರಷ್ಟು ವಿದ್ಯುತ್ ಸಂಪರ್ಕ ಕಲ್ಪಿಸಿದಂತಾಗಿದೆ ಎಂದು ಅವರು ವಿವರಿಸಿದರು.
ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಡಿ, 2.6 ಲಕ್ಷ ಗ್ರಾಮ ಪಂಚಾಯಿತಿಗಳು ಹಾಗೂ 4 ಸಾವಿರಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ಜನಪರ ಯೋಜನೆಗಳಿಗೆ ನೆರವು ನೀಡಲಾಗಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 4 ಕೋಟಿಗೂ ಹೆಚ್ಚು ಸುಸಜ್ಜಿತ ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ. ಮುದ್ರಾ ಯೋಜನೆಯಡಿ 52.5 ಕೋಟಿ ಸಾಲಗಳನ್ನು ಮಂಜೂರು ಮಾಡಲಾಗಿದೆ. ದೇಶದ ಬುಡಕಟ್ಟು ಪ್ರದೇಶಗಳಲ್ಲಿನ ಶಾಲೆಗಳ ಸಂಖ್ಯೆ ಕಳೆದ ದಶಕದಿಂದೀಚೆಗೆ ೪ ಪಟ್ಟು ಹೆಚ್ಚಳವಾಗಿದೆ ಎಂದು ಅವರು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!