ವಿಮಾನದಲ್ಲಿ ವೃದ್ಧೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ವ್ಯಕ್ತಿ ಬಂಧನಕ್ಕೆ ಸಿದ್ಧತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಳೆದ ವರ್ಷ ನವೆಂಬರ್ 26 ರಂದು ನ್ಯೂಯಾರ್ಕ್ ನಿಂದ ದೆಹಲಿಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೃದ್ಧೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿರುವ ಪ್ರಕರಣ ಸಂಭಂಧಿಸಿದಂತೆ ವ್ಯಕ್ತಿಯ ಗುರುತು ಸಿಕ್ಕಿದ್ದು, ಬಂಧಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ ವೃದ್ಧೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಘಟನೆಯ ಬಗ್ಗೆ ಕ್ಯಾಬಿನ್ ಸಿಬ್ಬಂದಿಗೆ ದೂರು ನೀಡಿದರೂ ಅವರು ತಕ್ಷಣ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಆದರೆ, ಏರ್ ಇಂಡಿಯಾ ಸಿಬ್ಬಂದಿ ವ್ಯಕ್ತಿಯ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.

ವೃದ್ಧೆ ತಾವು ಎದುರಿಸಿದ ತೊಂದರೆಯ ಬಗ್ಗೆ ಏರ್ ಇಂಡಿಯಾ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮನವಿ ಮಾಡಲಾಗಿದೆ. ವ್ಯಕ್ತಿಯೊಬ್ಬ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದರೂ, ವಿಮಾನದ ಸಿಬ್ಬಂದಿ ತನ್ನನ್ನು ಸರಿಯಾಗಿ ನೋಡಿಕೊಳ್ಳಲಿಲ್ಲ, ಇದರಿಂದ ನಾನು ಸಾಕಷ್ಟು ತೊಂದರೆ ಎದುರಿಸಬೇಕಾಯಿತು ಎಂದು ಪತ್ರದ ಮೂಲಕ ಹೇಳಿದ್ದಾಳೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಐಜಿಐ ವಿಮಾನ ನಿಲ್ದಾಣ) ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಪೊಲೀಸ್ ತನಿಖೆಯ ಭಾಗವಾಗಿ ಪೊಲೀಸರು ಆರೋಪಿಯನ್ನು ಗುರುತಿಸಿದ್ದು, ಆತನನ್ನು ಬಂಧಿಸಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!