ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ: ಕೊಡಗು ಜಿಲ್ಲಾಧಿಕಾರಿ ಆದೇಶ

ಹೊಸ ದಿಗಂತ ವರದಿ, ಮಡಿಕೇರಿ:

ಮಡಿಕೇರಿ ಜಿಲ್ಲೆಯಲ್ಲಿ ಏಪ್ರಿಲ್ 22 ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ಪರೀಕ್ಷೆ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ.

ಅಲ್ಲದೆ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ಆರಕ್ಷಕ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ.
ಪರೀಕ್ಷಾ ಕೇಂದ್ರದೊಳಗೆ ಮುಖ್ಯ ಅಧೀಕ್ಷಕರು ಸಾಮಾನ್ಯ ಮೊಬೈಲ್ (ಬೇಸಿಕ್ ಮೊಬೈಲ್) ಮಾತ್ರ ಇರಿಸಿಕೊಳ್ಳಬಹುದಾಗಿದ್ದು, ಉಳಿದಂತೆ ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.
ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ವಿವರ
ಗೋಣಿಕೊಪ್ಪ ಕಾವೇರಿ ಪದವಿ ಪೂರ್ವ ಕಾಲೇಜು, ನಾಪೋಕ್ಲು, ಪೊನ್ನಂಪೇಟೆ, ಸೋಮವಾರಪೇಟೆ, ವೀರಾಜಪೇಟೆ, ಮಡಿಕೇರಿ, ಕುಶಾಲನಗರ, ನೆಲ್ಯಹುದಿಕೇರಿ, ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು, ಮೂರ್ನಾಡು ಪದವಿ ಪೂರ್ವ ಕಾಲೇಜು, ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜು, ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು, ಶ್ರೀಮಂಗಲ ಪದವಿ ಪೂರ್ವ ಕಾಲೇಜು, ಶನಿವಾರಸಂತೆ ಪದವಿ ಪೂರ್ವ ಕಾಲೇಜು, ಮಡಿಕೇರಿ ಸಂತ ಮೈಕಲರ ಪದವಿ ಪೂರ್ವ ಕಾಲೇಜು, ವೀರಾಜಪೇಟೆ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು ಮತ್ತು ಕುಶಾಲನಗರ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ.
6050 ವಿದ್ಯಾರ್ಥಿಗಳು
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 6,050 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಕಲಾ ವಿಭಾಗದಲ್ಲಿ 1,570, ವಾಣಿಜ್ಯ ವಿಭಾಗದಲ್ಲಿ 3,192, ವಿಜ್ಞಾನ ವಿಭಾಗದಲ್ಲಿ 1,288 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 2,919 ಬಾಲಕರು ಮತ್ತು 3,131 ಬಾಲಕಿಯರಿದ್ದಾರೆ.
ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯುವ 6,050 ವಿದ್ಯಾರ್ಥಿಗಳಲ್ಲಿ, 5423 ವಿದ್ಯಾರ್ಥಿಗಳು ಹೊಸದಾಗಿ (ಫ್ರಶರ್ಸ್), 368 ಮಂದಿ ಪುನರಾವರ್ತಿತ (ರಿಪಿಟರ್ಸ್) ಹಾಗೂ ಖಾಸಗಿಯಾಗಿ 259 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!