ಹೊಸದಿಗಂತ ಡಿಜಿಟಲ್ ಡೆಸ್ಕ್:
ನನಗೆ ಕನಕಪುರ ಎಷ್ಟು ಮುಖ್ಯವೋ, ಅಷ್ಟೇ ಮಂಡ್ಯದ ಏಳು ಕ್ಷೇತ್ರಗಳು ಮುಖ್ಯಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮದ್ದೂರಿನಲ್ಲಿ ಸೋಮವಾರ ನಡೆದ 1146 ಕೋಟಿ ರೂ. ಮೊತ್ತದ ವಿವಿಧ ಇಲಾಖೆಗಳ ಹಲವು ಯೋಜನೆಗಳ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಇಂದು ನಿಮ್ಮಿಂದ ಜೈಕಾರ ಹಾಕಿಸಿಕೊಳ್ಳಲು ಬಂದಿಲ್ಲ. ಈ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಉದಯ್ ಅವರನ್ನು ಗೆಲ್ಲಿಸಿ ಜಿಲ್ಲೆಯ 7 ಸ್ಥಾನಗಳ ಪೈಕಿ 6ರಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಿದ್ದೀರಿ. ಆ ಮೂಲಕ ರಾಜ್ಯದಲ್ಲಿ 136 ಸಂಖ್ಯಾಬಲದ ಬಲಿಷ್ಠ ಸರ್ಕಾರ ರಚನೆಗೆ ಸಹಕಾರ ನೀಡಿರುವ ನಿಮ್ಮ ಋಣ ತೀರಿಸಲು ನಾವಿಲ್ಲಿಗೆ ಬಂದಿದ್ದೇವೆ ಎಂದು ಹೇಳಿದರು.
ನೀರಾವರಿ ಇಲಾಖೆಯ ಕಚೇರಿಯನ್ನು ನಾನು ಆರಂಭಿಸುತ್ತಿದ್ದೇನೆ. ಮಳವಳ್ಳಿವರೆಗೂ ನೀರು ಹರಿಸಿ, ಮದ್ದೂರಿನ ಕಾಲುವೆಗಳ ಅಭಿವೃದ್ಧಿ ದೃಷ್ಟಿಯಿಂದ ಸುಮಾರು 500 ಕೋಟಿಗೂ ಹೆಚ್ಚು ಮೊತ್ತದ ಹಣವನ್ನು ನೀಡಿದ್ದೇವೆ. ಚೆಲುವರಾಯಸ್ವಾಮಿ ಅವರು ಕೂಡ ಸಾಕ್ಷಿಗುಡ್ಡೆ ಬಿಟ್ಟು ಹೋಗಲು, ರೈತರ ಮಕ್ಕಳಿಗಾಗಿ ಕೃಷಿ ವಿವಿ ತರಲು ಮುಂದಾಗಿದ್ದಾರೆ. ಜಿಲ್ಲೆಯ ಏಳೂ ಕ್ಷೇತ್ರಗಳಲ್ಲಿ ವಿವಿಧ ಯೋಜನೆ ಹಮ್ಮಿಕೊಳ್ಳಲಾಗಿದೆ. ಈ ಜಿಲ್ಲೆಯಲ್ಲಿ ಅತಿಹೆಚ್ಚು ಶಾಸಕರು ಗೆದ್ದಾಗ ಕಾಂಗ್ರೆಸ್ ಸರ್ಕಾರ ರಚನೆಯಾಗಿದೆ ಎಂದರು.
ನನಗೆ ಕನಕಪುರ ಕ್ಷೇತ್ರ ಎಷ್ಟು ಮುಖ್ಯವೋ, ಅದೇ ರೀತಿ ಮಂಡ್ಯ ಜಿಲ್ಲೆಯ ಪ್ರತಿಯೊಂದು ಕ್ಷೇತ್ರವೂ ಮುಖ್ಯ. ದೇವರು ವರ ಹಾಗೂ ಶಾಪ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ನಮಗೆ ಸಿಕ್ಕ ಅವಕಾಶದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನ ಅಚ್ಛೇದಿನ ಬರುತ್ತದೆ ಎಂದಿದ್ದರು. ಅವರು ಹೇಳಿದ್ದ ಅಚ್ಛೇದಿನ, ಖಾತೆಗೆ 15 ಲಕ್ಷದ ವಿಚಾರ ಏನಾಯ್ತು ಎಂದು ನೀವೆಲ್ಲರೂ ಬಿಜೆಪಿ ಹಾಗೂ ಕುಮಾರಸ್ವಾಮಿ ಅವರನ್ನು ಕೇಳಬೇಕು ಎಂದು ಅವರು ಹೇಳಿದರು.
ನಾವು ನಮ್ಮ ಕರ್ತವ್ಯ ಮಾಡುತ್ತಿದ್ದೇವೆ. ಮಂಡ್ಯ ಜಿಲ್ಲೆಯ ಅಭಿವೃದ್ಧಿಗಾಗಿ ಇನ್ನು ಹಲವು ಕಾರ್ಯಕ್ರಮ ರೂಪಿಸುತ್ತಿದ್ದೇವೆ. ನಮ್ಮ ಸಚಿವರುಗಳು ತಮ್ಮ ತಮ್ಮ ಇಲಾಖೆಗಳ ಜವಾಬ್ದಾರಿ ವಹಿಸಿಕೊಂಡ ಬಳಿಕ ಬಡವರ ಬದುಕಿನಲ್ಲಿ ಸುಧಾರಣೆ ತರಲು ಕಾರ್ಯಕ್ರಮ ರೂಪಿಸಿದ್ದಾರೆ. ಎಂಎಲ್‌ಸಿಗಳಾದ ದಿನೇಶ್ ಗೂಳಿಗೌಡ, ಮಧುಮಾದೇಗೌಡ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯ ಜೆಡಿಎಸ್ ನಾಯಕರಿಗೆ ಒಂದು ಮಾತು ಹೇಳಲು ಬಯಸುತ್ತೇನೆ. ನೀವು ನಿಮ್ಮ ಸಮಯ ವ್ಯರ್ಥ ಮಾಡಿಕೊಳ್ಳಬೇಡಿ. ಈಗೇನಿದ್ದರೂ ಕಾಂಗ್ರೆಸ್ ಕಾಲ. ಶಿವಪುರ ಸೌಧದಲ್ಲಿ ಹೇಗೆ ರಾಷ್ಟ್ರಧ್ವಜ ಹಾರುತ್ತಿದೆಯೋ ಅದೇ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಧ್ವಜ ನಿರಂತರವಾಗಿ ಹಾರಾಡಲಿದೆ. ನೀವು ನಿಮ್ಮ ಬದುಕನ್ನು ಗಮನದಲ್ಲಿಟ್ಟುಕೊಂಡು ಆಲೋಚಿಸಿ ಎಂದು ಹೇಳಿದರು.