Sunday, December 10, 2023

Latest Posts

ಕಾಡಾನೆ ಹಾವಳಿ ತಡೆಗೆ ಟಾಸ್ಕ್ ನಾಲ್ಕು ಜಿಲ್ಲೆಗಳಲ್ಲಿ ಫೋರ್ಸ್ ರಚಿಸಿದ ರಾಜ್ಯ ಸರಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚಿಕ್ಕಮಗಳೂರಿನ ಕಾಡಾನೆ ದಾಳಿ ಬಳಿಕ ಎಚ್ಚೆತ್ತ ರಾಜ್ಯ ಸರಕಾರ , ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಎಲಿಪೆಂಟ್ ಟಾಸ್ಕ್ ಫೋರ್ಸ್ ರಚಿಸಲು ನಿರ್ಧರಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಧಾರವಾದ ಬೆನ್ನಲ್ಲೇ ಸರ್ಕಾರದಿಂದ ಹೊಸ ಆದೇಶ ಹೊರಡಿಸಲಾಗಿದೆ.

ಹಾಸನ, ಚಿಕ್ಕಮಗಳೂರು, ಮೈಸೂರು, ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ಹೆಚ್ಚಳವಾಗಿರುವುದರಿಂದ ಪ್ರತಿ ಜಿಲ್ಲೆಗೊಂದರಂತೆ ಉಪಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲಿಫಾಂಟ್ ಟಾಸ್ಕ್ ಫೋರ್ಸ್ ರಚಿಸಲಾಗುವುದು.

ಈ ಟಾಸ್ಕ್ ಫೋರ್ಸ್ ತಕ್ಷಣದಿಂದಲೇ ರಚಿಸಿ ಕಾರ್ಯಪ್ರವೃತ್ತರಾಗಬೇಕಿದ್ದು, ಆಯಾ ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ ಕಾರ್ಯನಿರ್ವಹಿಸಬೇಕಿದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಸರ್ಕಾರದ ಆದೇಶದಂತೆ , ಕಾಡಾನೆ ಹಾವಳಿ ಇರುವ ಪ್ರದೇಶಗಳಲ್ಲಿ ಗಸ್ತು ತಿರುವುದು, ಜನವಸತಿ, ಕೃಷಿ ಪ್ರದೇಶ ಹಾಗೂ ಕಾಫಿ ಎಸ್ಟೇಟ್ ಗಳಲ್ಲಿ ಆನೆಗಳ ಚಲನವಲನ ಗುರುತಿಸಿ ಅರಣ್ಯಕ್ಕೆ ಆನೆಗಳನ್ನು ಹಿಮ್ಮೆಟ್ಟಿಸುವುದು ಮುಂತಾದ ಕಾರ್ಯಗಳನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ ಕೈಗೊಳ್ಳಬೇಕು ಎಂದಿದೆ.

ಪ್ರತಿ ಟಾಸ್ಕ್ ಫೋರ್ಸ್ ಕೇಂದ್ರಸ್ಥಾನದಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಿ ದೂರವಾಣಿ ಸಂಖ್ಯೆ ಯನ್ನು ಪ್ರಚುರಪಡಿಸುವುದು ಎಂದು ತಿಳಿಸಿದೆ.
ಆನೆಗಳನ್ನು ಹಿಮ್ಮೆಟ್ಟಿಸಲು ಅಗತ್ಯವಿರುವ ವಾಕಿಟಾಕಿ, ಬಂದೂಕು, ಪಟಾಕಿ ಇನ್ನಿತರೆ ಅವಶ್ಯಕ ಸಲಕರಣೆಗಳನ್ನು ಅರಣ್ಯ ಪಡೆ ಮುಖ್ಯಸ್ಥರು ಒದಗಿಸುವುದು. ಅರಣ್ಯ ಪಡೆ ಮುಖ್ಯಸ್ಥರು ಜಿಲ್ಲಾ ಟಾಸ್ಕ್ ಫೋರ್ಸ್ ಗೆ ವಲಯ ಅರಣ್ಯಾಧಿಕಾರಿ, ಉಪವಲಯ ಅರಣ್ಯಾಧಿಕಾರಿ ಹಾಗೂ ಅರಣ್ಯ ರಕ್ಷ ಕರನ್ನು ಸ್ಥಳ ನಿಯುಕ್ತಿಗೊಳಿಸಿ ಕೂಡಲೇ ಆದೇಶ ಹೊರಡಿಸುವುದು ಎಂದು ಹೇಳಿದೆ.

ಪ್ರತಿ ಜಿಲ್ಲಾ ಟಾಸ್ಕ್ ಪ್ಫೋರ್ಸ್ ಗೆ ಮೂರು ಬೊಲೆರೋ ಜೀಪ್ ಗಳನ್ನು ಒದಗಿಸುವುದು ಹಾಗೂ ಕ್ಯಾಂಟರ್ ವಾಹನಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನಿಯೋಜಿಸುವುದು. ಆನೆಗಳನ್ನು ಹಿಮ್ಮೆಟ್ಟಿಸುವ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆ ಸಹಾಯ ಪಡೆಯುವುದು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!