ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯಿದೆ 2004 ಅನ್ನು ಸಾಂವಿಧಾನಿಕ ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದ್ದು, ಈ ಮೂಲಕ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಅಸಂವಿಧಾನಿಕ ತೀರ್ಪನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಮಂಗಳವಾರ ಈ ತೀರ್ಪು ನೀಡಿದೆ.
ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ತಳ್ಳಿಹಾಕಿದ ಸುಪ್ರೀಂಕೋರ್ಟ್, ಯುಪಿ ಮದರಸಾ ಕಾಯ್ದೆ ಮೂಲಭೂತ ಹಕ್ಕುಗಳ ಉಲ್ಲಂಘನೆಯಲ್ಲ. ಮದರಸಾ ಕಾಯಿದೆಯು ಸಂವಿಧಾನದ ಮೂಲ ರಚನೆಯ ಉಲ್ಲಂಘನೆಯಲ್ಲ. ಶಿಕ್ಷಣ ಗುಣಮಟ್ಟದ ನಿಯಮಗಳು ಮದರಸಾಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಪಠ್ಯಕ್ರಮದ ಜತೆಗೆ ವಿದ್ಯಾರ್ಥಿಗಳ ಆರೋಗ್ಯವೂ ಮುಖ್ಯವಾಗಿದೆ ಎಂದಿದೆ.
ಇದು ಜಾತ್ಯತೀತ ತತ್ವವನ್ನು ಉಲ್ಲಂಘಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ನ್ಯಾಯಾಲಯದ ಈ ನಿರ್ಧಾರವು ಯುಪಿಯಲ್ಲಿ ಮದರಸಾಗಳು ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತದೆ ಎಂದರ್ಥ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಯಾವುದೇ ಅಪಾಯವಿಲ್ಲ. ಯುಪಿಯಲ್ಲಿ 13 ಸಾವಿರ ಮದರಸಾಗಳಲ್ಲಿ 17 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದಾರೆ.
ಅಲಹಾಬಾದ್ ಹೈಕೋರ್ಟ್ ಆದೇಶ ಏನಿತ್ತು?
ಮಾರ್ಚ್ 22ರಂದು, ಅಲಹಾಬಾದ್ ಹೈಕೋರ್ಟ್ ಈ ಕಾನೂನನ್ನು ಅಸಂವಿಧಾನಿಕ ಮತ್ತು ಜಾತ್ಯತೀತತೆಯ ತತ್ವವನ್ನು ಉಲ್ಲಂಘಿಸುತ್ತದೆ ಎಂದು ಘೋಷಿಸಿತು. ಮದರಸಾಗಳ ವಿದ್ಯಾರ್ಥಿಗಳನ್ನು ಔಪಚಾರಿಕ ಶಾಲೆಗಳಿಗೆ ಕಳುಹಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಹೈಕೋರ್ಟ್‌ನ ಈ ಆದೇಶವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಮದರಸಾಗಳ ವಿದ್ಯಾರ್ಥಿಗಳಿಗೆ ರಿಲೀಫ್ ನೀಡಿ, ಸುಪ್ರೀಂಕೋರ್ಟ್ ಏಪ್ರಿಲ್ 5 ರಂದು ಹೈಕೋರ್ಟ್ ಆದೇಶಕ್ಕೆ ತಡೆ ನೀಡಿತ್ತು. ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ತೀರ್ಪನ್ನು ಅಕ್ಟೋಬರ್ 22ರಂದು ಸುಪ್ರೀಂಕೋರ್ಟ್ ಕಾಯ್ದಿರಿಸಿತ್ತು.
ಯೋಗಿ ಸರ್ಕಾರವು ಕಾಯ್ದೆಗೆ ಸಂಪೂರ್ಣವಾಗಿ ವಿರುದ್ಧವಾಗಿಲ್ಲ. ಈ ಕುರಿತು ಸುಪ್ರೀಂ ಕೋರ್ಟ್‌ನಲ್ಲೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅಲಹಾಬಾದ್ ಹೈಕೋರ್ಟ್ ಸಂಪೂರ್ಣ ಕಾನೂನನ್ನು ಅಸಾಂವಿಧಾನಿಕ ಎಂದು ಪರಿಗಣಿಸಬಾರದು ಎಂದು ಉತ್ತರ ಪ್ರದೇಶ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು. ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿರುವ ಕಾಯಿದೆಯ ನಿಬಂಧನೆಗಳನ್ನು ಮಾತ್ರ ಪರಿಶೀಲಿಸಬೇಕು. ಕಾಯ್ದೆಯನ್ನು ಸಂಪೂರ್ಣವಾಗಿ ತಿರಸ್ಕರಿಸುವುದು ಸೂಕ್ತವಲ್ಲ. ಮದರಸಾ ಕಾಯಿದೆಯಲ್ಲಿ ಖಂಡಿತವಾಗಿಯೂ ಬದಲಾವಣೆ ತರಬಹುದು ಆದರೆ ಅದನ್ನು ಸಂಪೂರ್ಣವಾಗಿ ರದ್ದುಗೊಳಿಸಿರುವುದು ಸರಿಯಲ್ಲ ಎಂದು ವಕೀಲರು ಹೇಳಿದರು.