ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನು ಪತ್ನಿಯೇ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬಾಲಕೃಷ್ಣ ಪೂಜಾರಿ (44) ಕೊಲೆಯಾದ ವ್ಯಕ್ತಿ. ಆತನ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಬಾಲಕೃಷ್ಣ ಪೂಜಾರಿ ಕಳೆದ 25 ದಿನಗಳಿಂದ ಜ್ವರ, ವಾಂತಿ ಆಗಿ ಅನಾರೋಗ್ಯದಿಂದ ಬಳಲುತ್ತಿದ್ದ. ಕಾಮಾಲೆ ರೋಗ ಎಂದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಅ.20 ರಂದು ಬಾಲಕೃಷ್ಣ ಮನೆಯಲ್ಲಿ ಸಾವನ್ನಪ್ಪಿದ್ದರು.
ಬಳಿಕ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಪ್ರತಿಮಾಳ ಸಹೋದರನೇ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಯಿತು. ತನಿಖೆ ವೇಳೆ ಪ್ರತಿಮಾ ಮತ್ತು ಆಕೆಯ ಪ್ರಿಯಕರನ ದಿಲೀಪ್ ಮೇಲೆ ಸಂಶಯ ವ್ಯಕ್ತವಾಗಿ ವಿಚಾರಣೆಗೆ ಒಳಪಡಿಸಲಾಯಿತು.
ಬಾಲಕೃಷ್ಣ ಸಾವಿನ ಬಳಿಕ ಪತ್ನಿ ಪ್ರತಿಮಾನ ಚಲನವಲನ ಬಗ್ಗೆ ಆಕೆಯ ಸಹೋದರನೇ ಅನುಮಾನಗೊಂಡಿದ್ದ. ಸಾವಿನ ಬಗ್ಗೆ ಆಕೆಯನ್ನು ಪ್ರಶ್ನಿಸಿದ್ದಾನೆ. ಪ್ರತಿಮಾ ತನ್ನ ಸಹೋದರನ ಬಳಿ ಎಲ್ಲವನ್ನೂ ಹೇಳಿಕೊಂಡಿದ್ದಾಳೆ. ಊಟದಲ್ಲಿ ವಿಷ ಬೆರೆಸಿ ಬಳಿಕ ಬೆಡ್‌ಶೀಟ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಪ್ರತಿಮಾ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಪ್ರಿಯಕರನ ಜೊತೆ ಸೇರಿಕೊಂಡು ಪತಿ ಕೊಲೆ ಮಾಡಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆಂದು ತಿಳಿದುಬಂದಿದೆ.