ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಬರ ಪರಿಸ್ಥಿತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಹಂಪಿ ಉತ್ಸವ ಮುಂದಿನ ವರ್ಷ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ವಿಜಯನಗರ – ಬಳ್ಳಾರಿ ಸೇರಿದಂತೆ ಬಹುತೇಕ ಜಿಲ್ಲೆಗಳ ಹೆಚ್ಚಿನ ಸಂಖ್ಯೆಯ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಹೀಗಾಗಿ ಇಂತಹ ಸ್ಥಿತಿಯಲ್ಲಿ ಉತ್ಸವ ನಡೆಸುವುದು ಕಷ್ಟ. ಫೆಬ್ರವರಿ ವೇಳೆಗೆ ಪರಿಸ್ಥಿತಿ ನೋಡಿಕೊಂಡು ಉತ್ಸವ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಈ ಮುಂಚೆ ನವೆಂಬರ್ನಲ್ಲಿ ಉತ್ಸವ ನಡೆಸಲು ನಿರ್ಧಾರ ಮಾಡಲಾಗಿತ್ತು. ಆದರೆ, ಬರ ಪರಿಸ್ಥಿತಿಯಿಂದಾಗಿ ಮುಖ್ಯಮಂತ್ರಿ ಅವರು ಫೆಬ್ರವರಿಯಲ್ಲಿ ನಡೆಸಿ ಎಂದು ಸಲಹೆ ನೀಡಿದ್ದು, ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.