ಹೊಸದಿಗಂತ ವರದಿ, ಮಂಗಳೂರು:
ಬಿಜೆಪಿಯಲ್ಲಿ ಮೂಲ- ವಲಸಿಗ ಎಂಬ ಯಾವುದೇ ಬೇಧ ಇಲ್ಲ. ಬಿಜೆಪಿಯಲ್ಲಿರುವ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಆದರೆ, ಕಾಂಗ್ರೆಸ್‌ನಲ್ಲಿ ಈಗ ಮೂರು ಬಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಗೊಂದಲದಲ್ಲಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು.
ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಬಿಜೆಪಿ ದ.ಕ. ಜಿಲ್ಲಾ ಕಚೇರಿಗೆ ಶುಕ್ರವಾರ ಭೇಟಿ ನೀಡಿದ ವೇಳೆ ಸುದ್ದಿಗಾರರ ಜತೆ ಮಾತನಾಡಿದರು.
ಕಾಂಗ್ರೆಸ್‌ನಲ್ಲಿ ಡಿಕೆಶಿ, ಸಿದ್ದರಾಮಯ್ಯ ಬಣದ ಜತೆಗೆ ಮಲ್ಲಿಕಾರ್ಜುನ ಖರ್ಗೆ, ಡಾ. ಜಿ. ಪರಮೇಶ್ವರ್, ಬಿ.ಕೆ. ಹರಿಪ್ರಸಾದ್ ಅವರನ್ನೊಳಗೊಂಡ ಮತ್ತೊಂದು ಬಣ ಸೃಷ್ಟಿಯಾಗಿದೆ. ಇದರಿಂದ ಮುಂದೆ ಏನಾಗುತ್ತದೆ ಎಂಬುದನ್ನು ಕಾದುನೋಡಿ. ಉತ್ತರಪ್ರದೇಶ ಚುನಾವಣೆ ಸಹಿತ ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಗೆಲ್ಲಲಿದ್ದು, ರಾಜ್ಯದಲ್ಲೂ ಮುಂದಿನ ಅವಧಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.
ತನ್ನ ಭವಿಷ್ಯದ ಬಗ್ಗೆ ಅಭದ್ರತೆ ಕಾಡುತ್ತಿರುವ ಕಾರಣ ಕಾಂಗ್ರೆಸ್ ಮೇಕೆದಾಟು ವಿಚಾರದಲ್ಲಿ ಗೊಂದಲ ಸೃಷ್ಟಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾರಾಯಣಗುರುಗಳ ಸ್ತಬ್ದಚಿತ್ರ ವಿಷಯದಲ್ಲಿ ಅಪಪ್ರಚಾರ ನಡೆಸುತ್ತಿದೆ ಎಂದರು.
ಬಸವರಾಜ ಬೊಮ್ಮಾಯಿ ಅವರ ಸರಕಾರಕ್ಕೆ ಆರು ತಿಂಗಳು ತುಂಬಿದ ಬಗ್ಗೆ ಪ್ರತಿಕ್ರಿಯಿಸಿದ ಸುನೀಲ್ ಕುಮಾರ್, ಸರಕಾರ ವಿವಿಧ ಅಭಿವೃದ್ಧಿ ಕಾರ್ಯಗಳ ಜತೆಗೆ ಆರ್ಥಿಕ ಪ್ರಗತಿಗೂ ಶ್ರಮಿಸುತ್ತಿದೆ. ಮುಂದಿನ ಬಜೆಟ್‌ನಲ್ಲಿ ಇನ್ನಷ್ಟು ಯೋಜನೆಗಳನ್ನು ನೀಡುವ ಮೂಲಕ ಜನರಿಗೆ ಮತ್ತಷ್ಟು ಹತ್ತಿರವಾಗಲಿದೆ ಎಂದರು.