ಹೊಸದಿಗಂತ ಬೆಳಗಾವಿ:
“ಚುನಾವಣಾ ಆಯೋಗ ನಡೆಸುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷವು ಎಂದಿಗೂ ರಾಜಕೀಯ ಹಸ್ತಕ್ಷೇಪ ಮಾಡುವುದಿಲ್ಲ. ಆದರೆ, ಯಾವುದೇ ಒಬ್ಬ ನಿಜವಾದ ಮತದಾರ ಪಟ್ಟಿಯಿಂದ ಹೊರಗುಳಿಯಬಾರದು ಎಂಬುವುದೇ ನಮ್ಮ ಮೂಲ ಆಶಯ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗಾವಿಯಲ್ಲಿ ತಿಳಿಸಿದರು.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಸುಮಾರು 3 ಕೋಟಿ ಮತದಾರರು ಇನ್ನೂ ಸರಿಯಾಗಿ ಮ್ಯಾಪಿಂಗ್ ಆಗಿಲ್ಲ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದರು. ಈ ಪ್ರಕ್ರಿಯೆಯು ಅತ್ಯಂತ ಎಚ್ಚರಿಕೆಯಿಂದ ನಡೆಯಬೇಕಿದೆ. ಅರ್ಹ ಮತದಾರರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಲು ಈಗಾಗಲೇ ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಅವರು ವಿವರಿಸಿದರು.
ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಮೂಲಕ ನಡೆಸಬೇಕು ಎಂಬ ಸಾರ್ವಜನಿಕ ಬೇಡಿಕೆಯ ಬಗ್ಗೆ ಉತ್ತರಿಸಿದ ಮುಖ್ಯಮಂತ್ರಿಗಳು, “ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಬ್ಯಾಲೆಟ್ ಪೇಪರ್ ಮೂಲಕವೇ ನಡೆಯಬೇಕು ಎಂಬುದು ನಮ್ಮ ಸರ್ಕಾರದ ನಿಲುವು ಕೂಡ ಆಗಿದೆ,” ಎಂದು ಹೇಳುವ ಮೂಲಕ ಈ ಬೇಡಿಕೆಗೆ ತಮ್ಮ ಬೆಂಬಲ ಸೂಚಿಸಿದರು.


