ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರ ವಿಚಾರದಲ್ಲಿ ಕೇಂದ್ರ ಸರಕಾರ ಮೌನ ವಹಿಸಿದೆ ಎಂದು ವಿಪಕ್ಷಗಳು ದೂರುತ್ತಿದ್ದು, ಇದರ ಬೆನ್ನಲೇ ಕೇಂದ್ರ ಸಚಿವ ಅನುರಾಗ್ ಠಾಕೂರ್ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯ ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿಯೂ ಇಂದು ಮಹಿಳೆಯರ ಮೇಲೆ ದೌರ್ಜನ್ಯ ನಡೆದಿವೆ. ಆದರೆ, ಮಣಿಪುರ ಘಟನೆಯಷ್ಟೇ ರಾಜಕೀಯಕ್ಕೆ ಬಳಕೆಯಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಎರಡೂ ಕಡೆ ಅಧಿಕಾರದಲ್ಲಿರುವ ‘ಡಬಲ್ ಎಂಜಿನ್’ (ಬಿಜೆಪಿ) ಸರ್ಕಾರ, ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಪ್ರತಿಪಕ್ಷಗಳು ಕಿಡಿಕಾರುತ್ತಿವೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಅನುರಾಗ್ ಠಾಕೂರ್, ‘ರಾಜಸ್ಥಾನ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿಯೂ ಮಹಿಳೆಯರ ಮೇಲೆ ದೌರ್ಜನ್ಯ ನಡೆದಿವೆ. ಬಿಜೆಪಿಯೇತರ ಸರ್ಕಾರಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ನಡೆದಿರುವ ದೌರ್ಜನ್ಯ ಪ್ರಕರಣಗಳ ಬಗ್ಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಮೌನವಾಗಿರುವುದೇಕೆ?’ ಎಂದು ಪ್ರಶ್ನಿಸಿದ್ದಾರೆ.
ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಒಂದು ಲಕ್ಷಕ್ಕೂ ಅಧಿಕ ಪ್ರಕರಣಗಳು ಕಳೆದ ನಾಲ್ಕು ವರ್ಷಗಳಲ್ಲಿ ದಾಖಲಾಗಿವೆ. ಇದರಲ್ಲಿ 33,000 ಪ್ರಕರಣಗಳು ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ್ದಾಗಿವೆ’ ಎಂದು ಠಾಕೂರ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಸರಕಾರವಿರುವ ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಕುರಿತು ಕಳವಳ ವ್ಯಕ್ತಪಡಿಸಿದ್ದ ಅಲ್ಲಿನ ಸಚಿವ ರಾಜೇಂದ್ರ ಗುಢಾ ಅವರನ್ನು ಸಚಿವ ಸ್ಥಾನದಿಂದ ಇಂದು (ಶನಿವಾರ) ವಜಾಗೊಳಿಸಲಾಗಿದೆ. ಇದು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಸೂಚನೆ ಮೇರೆಗೆ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.
ಮುಖ್ಯಮಂತ್ರಿಯವರ ತವರು ಜಿಲ್ಲೆಯಲ್ಲಿ ಮಹಿಳೆಯೊಬ್ಬರನ್ನು ಕೊಲೆ ಮಾಡಿ ಸುಟ್ಟುಹಾಕಲಾಗಿತ್ತು. ಅವರ ನಿವಾಸದಿಂದ 5 ಕಿ.ಮೀ ದೂರದಲ್ಲಿ ಇನ್ನೊಬ್ಬ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದ ದುಷ್ಕರ್ಮಿಗಳು ಆಕೆಯನ್ನು ಸಾಯುವ ಸ್ಥಿತಿಯಲ್ಲಿ ಬಿಟ್ಟುಹೋಗಿದ್ದರು. ಮುಖ್ಯಮಂತ್ರಿಯವರು ಜಿಲ್ಲೆಯ ಮೇಲಿನ ಆಡಳಿತದ ನಿಯಂತ್ರಣ ಕಳೆದುಕೊಂಡಿದ್ದಾರೆ ಎಂದು ತಮ್ಮದೇ ಸಂಪುಟದ ಸಚಿವರು ಹೇಳಿದ್ದಾರೆ. ಈಗ ಗೆಹಲೋತ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಯೇ? ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಗಾಂಧಿ ಪರಿವಾರದ ನಾಯಕರಿಗೆ ಈ ಪ್ರಶ್ನೆ ಕೇಳುತ್ತಿದ್ದೇವೆ. ಅವರೇನಾದರೂ ತಮ್ಮ ಜವಾಬ್ದಾರಿಗಳನ್ನು ಮರೆತಿದ್ದಾರೆಯೇ’ ಎಂದು ಕೇಳಿದ್ದಾರೆ.
ಇದೆ ವೇಳೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ವಿರುದ್ಧವೂ ವಾಗ್ದಾಳಿ ನಡೆಸಿರುವ ಠಾಕೂರ್, ‘ಮಮತಾ ಬ್ಯಾನರ್ಜಿ ಅವರೇ ನಿಮ್ಮ ಹೃದಯದಲ್ಲಿ ಚೂರಾದರೂ ಮಮತೆ ಉಳಿದಿದೆಯೇ ಎಂಬುದು ಗೊತ್ತಿಲ್ಲ. ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಪಾಂಚಾಲ ಪ್ರದೇಶದಲ್ಲಿ ಪಂಚಾಯತಿ ಚುನಾವಣೆ ದಿನ ಟಿಎಂಸಿಯ 40 ಗೂಂಡಾಗಳು ಮಹಿಳೆಯನ್ನು ಬೆತ್ತಲಾಗಿಸಿ ಮೆರವಣಿಗೆ ನಡೆಸಿ, ಅಭ್ಯರ್ಥಿಗೆ ಹಲ್ಲೆ ಮಾಡಿ ಅವಮಾನಿಸಿದಾಗ ಮಾನವೀಯತೆ ತಲೆ ತಗ್ಗಿಸಿತ್ತು’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇವಲ ಇದೊಂದೇ ಪ್ರಕರಣವಲ್ಲ, ಮಾಲ್ದಾ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರನ್ನು ಅರೆಬೆತ್ತಲಾಗಿಸಿ ಮೆರವಣಿಗೆ ಮಾಡಿದ ವಿಡಿಯೊ ಹರಿದಾಡಿತ್ತು. ಮಮತಾ ಬ್ಯಾನರ್ಜಿ ಅವರ ‘ಮಮತೆ’ ಎಲ್ಲಿದೆ? ರಾಜ್ಯ ಸರ್ಕಾರವೆಲ್ಲಿದೆ? ಏಕೆ ಕ್ರಮ ಕೈಗೊಳ್ಳಲಿಲ್ಲ’ ಎಂದು ಪ್ರಶ್ನಿಸಿದ್ದಾರೆ.