ಹೊಸದಿಗಂತ ವರದಿ ಗದಗ:
ವಿಶ್ವಗುರು ಬಸವಣ್ಣನವರು ಜಗತ್ತಿಗೆ ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಸಾರಿದ ಮಹಾನ್ ಶರಣರು. ಇಂತಹ ಮಹಾಪುರುಷರ ಕುರಿತು ಅವಹೇಳನಕಾರಿ ಹೇಳಿಕೆ ನೀಡುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ಹೇಳಿದರು.
ನಗರದಲ್ಲಿ ಬಸವ ಮಂಟಪ ಗ್ರಂಥ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬಸವಣ್ಣನವರ ಕುರಿತು ಅವಮಾನಕರವಾಗಿ ಕೃತಿ ರಚಿಸಿರುವುದು ಅಕ್ಷಮ್ಯ ಅಪರಾಧ. ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ ಬಸವಣ್ಣನವರ ಬಗ್ಗೆ ಅವಹೇಳನಕಾರಿ ಅಭಿಪ್ರಾಯ ವ್ಯಕ್ತಪಡಿಸಿರುವುದರಿಂದ ಅವರ ಭಕ್ತರ ಭಾವನೆಗಳಿಗೆ ನೋವುಂಟಾಗಿದೆ. ಈ ಹಿನ್ನೆಲೆಯಲ್ಲಿ ವಿವಾದಿತ ಗ್ರಂಥವನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಗಳು ಈಗಾಗಲೇ ಗ್ರಂಥ ಮುಟ್ಟುಗೋಲಿಗೆ ಕ್ರಮ ಕೈಗೊಂಡಿದ್ದು, ಕೃತಿ ರಚಿಸಿದವರ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಸಿಎಂ ಬದಲಾವಣೆ ಚರ್ಚೆಗೆ ಆಧಾರವಿಲ್ಲ
ಚಳಿಗಾಲದ ಅಧಿವೇಶನದ ಬಳಿಕ ಶಾಸಕರ ಸಹಿ ಸಂಗ್ರಹಿಸಿ ಮುಖ್ಯಮಂತ್ರಿ ಬದಲಾವಣೆಗೆ ಪ್ರಯತ್ನಿಸಲಾಗುತ್ತದೆ ಎಂಬ ಮಾಜಿ ಶಾಸಕ ಬಿ. ಶ್ರೀರಾಮುಲು ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಖಂಡ್ರೆ, ಶ್ರೀರಾಮುಲು ಅವರಿಗೆ ಬೇರೆ ಕೆಲಸವಿಲ್ಲ. ಚುನಾವಣೆಯಲ್ಲಿ ಸೋತ ಬಳಿಕ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆಯ ಕುರಿತು ಯಾವುದೇ ಬೆಳವಣಿಗೆಗಳಿಲ್ಲ. ಶಾಸಕರ ಸಹಿ ಸಂಗ್ರಹಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸರ್ಕಾರ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ನೀಡುತ್ತಿದೆ. ಇಂತಹ ಸಂದರ್ಭದಲ್ಲಿ ಶಾಸಕರು ಸಹಿ ಸಂಗ್ರಹಿಸುವ ಅಗತ್ಯವಾದರೂ ಏನಿದೆ? ಮುಖ್ಯಮಂತ್ರಿ ಬದಲಾವಣೆ ಕುರಿತು ಹರಿದಾಡುತ್ತಿರುವ ಮಾತುಗಳಿಗೆ ಯಾವುದೇ ಆಧಾರವಿಲ್ಲ ಎಂದು ಹೇಳಿದರು.



