ಹೊಸದಿಗಂತ ಡಿಜಿಟಲ್ ಡೆಸ್ಕ್;
ರಾಹುಲ್ ಗಾಂಧಿ ವಿರುದ್ದ ಇಡಿ ವಿಚಾರಣೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧದ ಪ್ರಕರಣ ರದ್ದು ಕೋರಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ 6 ವಾರಗಳ ಕಾಲ ಮುಂದೂಡಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುಮತಿ ಇಲ್ಲದೆಯೂ ಪ್ರತಿಭಟನೆ ನಡೆಸಿದ್ದಕ್ಕೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಇತರೆ ನಾಯಕರ ವಿರುದ್ಧ ಕೇಸ್ ದಾಖಲಾಗಿತ್ತು. ಹೀಗಾಗಿ ಪ್ರಕರಣ ರದ್ದು ಮಾಡುವಂತೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು.ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ಗೆ ಇತ್ತೀಚೆಗೆ ಕೋರ್ಟ್ ಸಮನ್ಸ್ ನೀಡಿತ್ತು.
ಆಗಸ್ಟ್ 29ರಂದು ಖುದ್ದು ಹಾಜರಾಗುವಂತೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು. ಕಾನೂನುಬಾಹಿರವಾಗಿ ಪ್ರತಿಭಟನೆ ಮಾಡಿದ್ದಾರೆಂದು 2022ರಲ್ಲಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲಾಗಿತ್ತು.
ಪ್ರತಿಭಟನೆಯಿಂದ ಸಾರ್ವಜನಿಕರ ನೆಮ್ಮದಿಗೆ ಭಂಗವುಂಟಾಗಿದೆ ಮತ್ತು ಅಧಿಕಾರಿಗಳಿಂದ ಅಗತ್ಯ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಲಾಗಿದೆ ಎಂದು ಆರೋಪಿಸಲಾಗಿತ್ತು. ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಇದೇ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ನಂತರ ರದ್ದುಗೊಳಿಸಿತ್ತು.