Thursday, March 30, 2023

Latest Posts

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಯಲ್ಲಿ ಸದ್ಯಕ್ಕೆ ಇಲ್ಲ ಟೋಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ (Bangalore-Mysore Expressway) ಕಾಮಗಾರಿ ಪೂರ್ಣವಾಗದೆ ಟೋಲ್‌ ಆರಂಭದ ವಿರುದ್ಧ ಸಾರ್ವಜನಿಕ ವಲಯದಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಹೆದ್ದಾರಿಯ ಸರ್ವಿಸ್‌ ರಸ್ತೆಗಳ ಕಾಮಗಾರಿ ಪೂರ್ಣವಾಗುವವರೆಗೆ ಸುಂಕ ವಸೂಲಾತಿಯನ್ನು ಮುಂದೂಡಲು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ನಿರ್ಧರಿಸಿದೆ.

ಈ ಬಗ್ಗೆ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಾಕಿ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಸರ್ವಿಸ್‌ ರಸ್ತೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ಟೋಲ್‌ ಸಂಗ್ರಹ ನಿರ್ಧಾರವನ್ನು ಮುಂದೂಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸುಮಾರು 8000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ (Bangalore-Mysore Expressway) ಮೊದಲ ಹಂತದ ಕಾಮಗಾರಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಫೆ.27ರ ಬೆಳಗ್ಗೆ 8 ಗಂಟೆಯಿಂದ ಮೊದಲ ಹಂತದ ಟೋಲ್‌ ಕೇಂದ್ರಗಳು ಕಾರ್ಯಾರಂಭ ಮಾಡಲಿವೆ ಎಂದು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಪ್ರಕಟಣೆ ಹೊರಡಿಸಿತ್ತು.

ಇದೀಗ ಕಾಮಗಾರಿ ಪೂರ್ಣವಾಗದೆ ಟೋಲ್‌ ಸಂಗ್ರಹಕ್ಕೆ ಸೋಷಿಯಲ್‌ ಮೀಡಿಯಾ ಸೇರಿದಂತೆ ಹಲವು ಕಡೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜನಾಕ್ರೋಶಕ್ಕೆ ಮಣಿದು ಕೇಂದ್ರ ಸರ್ಕಾರ ಟೋಲ್‌ ಸಂಗ್ರಹ ನಿರ್ಧಾರವನ್ನು ಹಿಂಪಡೆದಿದೆ. ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವುದರಿಂದ ಸರ್ಕಾರದ ವಿರುದ್ಧ ಜನಾಕ್ರೋಶ ಸಾಧ್ಯತೆ ಇದೆ. ಹೀಗಾಗಿ ಪ್ರಯಾಣಿಕರಿಂದ ದುಬಾರಿ ಟೋಲ್​ ಸಂಗ್ರಹ ಮಾಡುವುದರಿಂದ ಸರ್ಕಾರಕ್ಕೆ ಡ್ಯಾಮೇಜ್ ಆಗುವ ಸಾಧ್ಯತೆ ಇದೆ ಎಂದು ಟೋಲ್‌ ಸಂಗ್ರಹ ನಿರ್ಧಾರ ಹಿಂಪಡೆಯಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!