ನನ್ನ ಹೆಸರಿನಲ್ಲೇ ರಾಮನಿದ್ದಾನೆ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ವರದಿ,ಮೈಸೂರು:

ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಭಾನುವಾರ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,

ಇವೆರಡೂ ಕಾಂಗ್ರೆಸ್ ಕ್ಷೇತ್ರಗಳು. ಮತ್ತೆ ನಮ್ಮ ‘ಕೈ’ಗೆ ಬರಲೇಬೇಕು. ಬರುತ್ತವೆ. ಹಿಂದಿನ ಬಾರಿ ಕೆಲವು ಕಾರಣಗಳಿಂದಾಗಿ ಅತ್ಯಂತ ಕಡಿಮೆ ಮತಗಳಿಂದ ನಮಗೆ ಹಿನ್ನೆಡೆಯಾಗಿತ್ತು. ಆದರೆ ಈ ಬಾರಿ ಬಿಜೆಪಿ ಪರವಾದ ಯಾವ ಕಾರಣಗಳೂ ಇಲ್ಲ. ರಾಜ್ಯದಲ್ಲಿ ಬಿಜೆಪಿ ವಿರೋಧಿಯಾದ ಅಲೆ ಜೋರಾಗಿದೆ. ಬಿಜೆಪಿಯ ಬೆಲೆ ಏರಿಕೆ ನೀತಿಯಿಂದ ಸಂಕಷ್ಟಕ್ಕೆ ತುತ್ತಾಗಿದ್ದ ರಾಜ್ಯದ ಎಲ್ಲಾ ಕುಟುಂಬಗಳಿಗೆ ಕಾಂಗ್ರೆಸ್ ಗ್ಯಾರಂಟಿಗಳು ನೆಮ್ಮದಿ ತರಿಸಿರುವುದನ್ನು ನಾಡಿನ ಜನತೆ ಹೃದಯಪೂರ್ವಕವಾಗಿ ಒಪ್ಪಿಕೊಂಡಿದ್ದಾರೆ ಎಂದರು.
ನಾವು ನಡೆಸಿರುವ ಹಲವು ಸಮೀಕ್ಷೆಗಳಲ್ಲಿ ಮೈಸೂರು, ಚಾಮರಾಜನಗರ ಕ್ಷೇತ್ರಗಳಲ್ಲಿ ಗೆಲ್ಲುವುದೂ ಸೇರಿ ೨೦ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ ಎನ್ಮುವ ವರದಿಗಳು ಬಂದಿವೆ. ಹೀಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಪರವಾದ ಅಭೂತಪೂರ್ವ ಫಲಿತಾಂಶ ಹೊರಗೆ ಬರಲಿದೆ ಎಂದು ತಿಳಿಸಿದರು.

ಹತ್ತು ವರ್ಷ ಅಧಿಕಾರ ಮಾಡಿದ ಮೋದಿ ಸರ್ಕಾರಕ್ಕೆ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲದ ಕಾರಣ ಜನರ ಬಳಿ ಹೋಗಲು ಮುಖ ಇಲ್ಲ. ಅದಕ್ಕೇ ಕೇವಲ ಮೋದಿಯವರ ಮುಖ ತೋರಿಸಿ ಚುನಾವಣೆ ಮಾಡ್ತೀವಿ ಎಂದು ಬಿಜೆಪಿ ಹೆಣಗಾಡುತ್ತಿದೆ. ಶ್ರೀರಾಮನ ಹೆಸರಲ್ಲಿ ಮತ ಕೇಳುವಂತಾಗಿದೆ. ರಾಮ ಸರ್ವರಿಗೂ ಸೇರಿದವನು.
ಶ್ರೀರಾಮಚಂದ್ರ, ಸೀತಾ , ಲಕ್ಷ್ಮಣ ಎಲ್ಲರೂ ನಮಗೆ ಪೂಜ್ಯರು. ಈಗ ಬಿಜೆಪಿ ಕೇವಲ ಜೈ ಶ್ರೀರಾಮ್ ಕೂಗುತ್ತದೆ. ನಾನು ಜೈ ಸೀತಾರಾಮ್ ಎಂದು ನಿರಂತರವಾಗಿ ಕೂಗುತ್ತೇವೆ. ನನ್ನ ಹೆಸರಿನಲ್ಲೇ ರಾಮ ಇದೆ ಎಂದರು.

ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡದ ಬಿಜೆಪಿ ಸುಳ್ಳುಗಳ ಮೊರೆ ಹೋಗಿದೆ. ನನ್ನ ಬಗ್ಗೆ , ನಮ್ಮ ನಾಯಕರ ಬಗ್ಗೆ, ನಮ್ಮ ಪಕ್ಷದ ಬಗ್ಗೆ ಸರಣಿ ಸುಳ್ಳುಗಳನ್ನು ಹೇಳುತ್ತಾ, ಸುಳ್ಳುಗಳ ಆಧಾರದಲ್ಲೇ ಚುನಾವಣೆ ಮಾಡುತ್ತಿದೆ ಎಂದು ಟೀಕಿಸಿದರು.

ಸಮಾಜದಲ್ಲಿರುವ ಅಸಮಾನತೆ ಹೋಗಬೇಕು. ಆದರೆ ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದೆ. ಸಮಾಜದಲ್ಲಿ ಬಿರುಕು ಮೂಡಿದಷ್ಟೂ ಅಸಮಾನತೆ ಬೆಳೆಯುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸಿಗುತ್ತಿದೆ. ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿ ಮತ್ತು ನರೇಂದ್ರ ಮೋದಿ ಹೇಳಿದ್ದರಲ್ಲಿ ಒಂದನ್ನೂ ಮಾಡಿಲ್ಲ ಎಂದು ಅವರ ವಿಫಲ ಅಶ್ವಾಸನೆಗಳ ಪಟ್ಟಿಯನ್ನೇ ನೀಡಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಆಶ್ರಯ ಯೋಜನೆ ಅಧ್ಯಕ್ಷರಾದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ. ಲಕ್ಷ÷್ಮಣ್ ಸೇರಿ ಮೂರು ಜಿಲ್ಲೆಗಳ ಎಲ್ಲಾ ಶಾಸಕರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!