March 29, 2026
Sunday, March 29, 2026
spot_img

ನ್ಯಾಯವಿತರಣೆಯಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಪೊಲೀಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಕುಂ

ಹೊಸದಿಗಂತ ಡಿಜಿಟಲ್ ಡೆಸ್ಕ್:


ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಹಾಗೂ ರಾಜ್ಯವನ್ನು ಮಾದಕವಸ್ತು ಮುಕ್ತಗೊಳಿಸಲು ಕಟಿಬದ್ಧರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.


ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿ ಆವರಣದಲ್ಲಿ ಇಂದು ನಡೆದ 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕರ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಸಮಾರಂಭದ ಮೂಲಕ ತರಬೇತಿ ಪೂರೈಸಿದ 377 ಹೊಸ ಸಬ್ ಇನ್ಸ್ಪೆಕ್ಟರ್‌ಗಳು ಅಧಿಕೃತವಾಗಿ ಸೇವೆಗೆ ಸೇರ್ಪಡೆಗೊಂಡರು. ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕಳೆದ ಮೂರು ವರ್ಷಗಳಲ್ಲಿ ಖಾಲಿ ಇದ್ದ 4 ಸಾವಿರದ 11 ಪಿಎಸ್‌ಐ ಹುದ್ದೆಗಳನ್ನು ಯಶಸ್ವಿಯಾಗಿ ಭರ್ತಿ ಮಾಡಲಾಗಿದೆ ಎಂದು ತಿಳಿಸಿದರು. ಈ ವರ್ಷದ ಬಜೆಟ್‌ನಲ್ಲಿ ಘೋಷಿಸಿದಂತೆ ಇನ್ನುಳಿದ 8 ಸಾವಿರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.


ಕರ್ತವ್ಯದ ಅವಧಿಯಲ್ಲಿ ಪೊಲೀಸರು ತಮ್ಮ ಕುಟುಂಬದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ, ಸರ್ಕಾರ ಸದಾ ನಿಮ್ಮ ರಕ್ಷಣೆಗೆ ಸಿದ್ಧವಿದೆ ಎಂದು ಸಿಎಂ ಅಭಯ ನೀಡಿದರು. ಮಾದಕ ವಸ್ತು ಮುಕ್ತ ರಾಜ್ಯ ನಿರ್ಮಾಣ ಮಾಡುವುದು ಸರ್ಕಾರದ ಸಂಕಲ್ಪವಾಗಿದ್ದು, ಸಮಾಜದ ಸ್ವಾಸ್ಥ್ಯ ಕಾಪಾಡಲು ಪೊಲೀಸರು ನಿಷ್ಠುರವಾಗಿ ಕೆಲಸ ಮಾಡಬೇಕು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.


ಇದೇ ವೇಳೆ ಅತ್ಯುತ್ತಮ ತರಬೇತಿ ನೀಡಿದ ಕರ್ನಾಟಕ ಪೊಲೀಸ್ ಅಕಾಡೆಮಿಯ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದ ಮುಖ್ಯಮಂತ್ರಿಗಳು, ಅವರಿಗೆ 2 ಲಕ್ಷ ರೂಪಾಯಿಗಳ ನಗದು ಬಹುಮಾನವನ್ನು ಘೋಷಿಸಿದರು. ಕಾರ್ಯಕ್ರಮದಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್, ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ, ಕೆ. ವೆಂಕಟೇಶ್, ಶಾಸಕ ತನ್ವೀರ್ ಸೇಠ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಪ್ರಶಿಕ್ಷಣಾರ್ಥಿಗಳ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !