ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲೆಗಳ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ ಮತ್ತು ಎರಡು ಜೊತೆ ಕಾಲು ಚೀಲ ನೀಡಬೇಕು ಎಂಬ ಆದೇಶ ಪಾಲಿಸದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಕಿಡಿಕಾರಿದೆ.
ರಾಜ್ಯ ಸರ್ಕಾರಕ್ಕೆ ಉತ್ಸವಗಳನ್ನು ನಡೆಸಲು ಕೋಟ್ಯಂತರ ರೂಪಾಯಿ ಖರ್ಚು ಮಾಡಲು ಮನಸ್ಸಿದೆ. ಆದರೆ, ಮಕ್ಕಳ ಹಕ್ಕು, ಶಿಕ್ಷಣಗಳ ವಿಚಾರದಲ್ಲಿ ತನ್ನ ಸಾಂವಿಧಾನಿಕ ಹೊಣೆಗಾರಿಕೆಯನ್ನು ನಿರ್ವಹಿಸಲು ಮಾತ್ರ ಆಗುತ್ತಿಲ್ಲ. ಅಧಿಕಾರಿಗಳಿಗಂತೂ ಮಾನ ಮರ್ಯಾದೆ, ಆತ್ಮಸಾಕ್ಷಿ ಯಾವುದೂ ಇಲ್ಲವಾಗಿದೆ. ಸರ್ಕಾರಿ ಶಾಲೆಗಳ ಮಕ್ಕಳ ಬಗ್ಗೆ ಅವರಲ್ಲಿ ಕಿಂಚಿತ್ ಮಾನವೀಯತೆಯೂ ಉಳಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ ಮತ್ತು ಎರಡು ಜೊತೆ ಕಾಲುಚೀಲಗಳನ್ನು ನೀಡಬೇಕು ಎಂದು 2018ರ ಆಗಸ್ಟ್ನಲ್ಲಿ ಹೈಕೋರ್ಟ್ ಹೊರಡಿಸಿರುವ ಆದೇಶ ಪಾಲನೆಯಾಗಿಲ್ಲ ಎಂದು ಆರೋಪಿಸಿ ಕೊಪ್ಪಳ ಜಿಲ್ಲೆಯ ಮಾಸ್ಟರ್ ಮಂಜುನಾಥ್ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರ ಸಲ್ಲಿಸಿದ ಪ್ರಮಾಣ ಪತ್ರದಲ್ಲಿನ ಲೋಪವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರು, ಸರಿಯಾದ ರೀತಿಯಲ್ಲಿ ಸಮವಸ್ತ್ರವನ್ನು ಯಾಕೆ ನೀಡಿಲ್ಲ? ಸಮವಸ್ತ್ರ, ಶೂ, ಕಾಲುಚೀಲ ವಿತರಣೆ ಹೊಣೆ ಹೊತ್ತಿರುವ ಅಧಿಕಾರಿ ಯಾರು ಎಂಬುದನ್ನು ತಿಳಿಸಿ.ಅವರ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ನಿಗದಿ ಮಾಡಲಾಗುತ್ತದೆ ಎಂದು ಸರ್ಕಾರಿ ವಕೀಲರಿಗೆ ತಾಕೀತು ಮಾಡಿದರು.