ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು 14 ಸೈಟ್‌ಗಳನ್ನು ವಾಪಸ್ ಮಾಡುವುದಾಗಿ ಮುಡಾಗೆ ಪತ್ರ ಬರೆದಿದ್ದು, ಈ ಪತ್ರದ ವಿಷಯವಾಗಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆರಂಭವಾಗಿದೆ.
ತಪ್ಪೇ ಮಾಡುತ್ತಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪು ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟಕ್ಕೆ ಸಿಕ್ಕ ಮತ್ತೊಂದು ಜಯ. ಆದರೆ, ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ.
ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಮುಡಾ ಸೈಟ್ ವಾಪಸ್ ಕೊಟ್ಟಿರುವುದು ರಾಜಕೀಯ ಡ್ರಾಮಾ. ಸಿದ್ದರಾಮಯ್ಯ ಅವರು ಇನ್ನು ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮೂಡಾ ನಿವೇಶನಗಳ ವಾಪಸ್ ನೀಡುವ ನಿರ್ಧಾರವು ಹಗರಣದಲ್ಲಿ ತಪ್ಪನ್ನು ಅಧಿಕೃತವಾಗಿ ಒಪ್ಪಿಕೊಂಡಂತೆ. ಹೀಗಾಗಿ ಸಿದ್ದರಾಮಯ್ಯ ಅವರು ತಕ್ಷಣವೇ ರಾಜೀನಾಮೆ ನೀಡಬೇಕು, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಿದರು.