ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಿದ್ದು, ಇದು ಜನತಾ ನ್ಯಾಯಾಲಯದಲ್ಲಿ ಗೆದ್ದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿನ ಗೆಲುವಿನ ಕ್ರೆಡಿಟ್ ನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿದರು.
ನ್ಯಾಯಾಲಯಗಳಿಗಿಂತ ಜನತಾ ನ್ಯಾಯಾಲಯವೇ ಮೇಲು ಅಂತಾ ಮಹಾತ್ಮ ಗಾಂಧಿ ಹೇಳಿದ್ದರು. ಈಗ ಜನತಾ ನ್ಯಾಯಾಲಯ ತೀರ್ಪು ನೀಡಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರಿಂದ ಈ ಗೆಲುವು ಕಾಂಗ್ರೆಸ್‌ಗೆ ಮಹತ್ವದ್ದಾಗಿದೆ. ನಾವು ಕಲ್ಯಾಣ ಕರ್ನಾಟಕ (ಸಂಡೂರು), ಕಿತ್ತೂರು ಕರ್ನಾಟಕ ಪ್ರದೇಶ (ಶಿಗ್ಗಾಂವಿ) ಮತ್ತು ಹಳೆಯ ಮೈಸೂರು (ಚನ್ನಪಟ್ಟಣ) ಕ್ಷೇತ್ರದಿಂದ ಗೆದ್ದಿದ್ದೇವೆ ಎಂದು ಅವರು ತಿಳಿಸಿದರು.
ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆಯೂ ಸುಳ್ಳು ಪ್ರಚಾರ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮಾಡಿಲ್ಲ ಎಂದಿದ್ದರು. ಆದರೆ, ನಮ್ಮ ಗೆಲುವಿನಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ ಎಂದರು.