ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ರಾಜ್ಯ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ ಇಲ್ಲ ಎಂದು ಹೇಳಲಾಗುತ್ತಿದ್ದು, ಯಾಕೆಂದರೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆಯೂ ಟಿಪ್ಪು ಜಯಂತಿ ರದ್ದತಿ ಆದೇಶವನ್ನು ಸರ್ಕಾರ ಹಿಂಪಡೆದಿಲ್ಲ.
ಇತ್ತ ಇಂದು ನಡೆದ ಸಂಪುಟ ಸಭೆಯಲ್ಲಿ ಟಿಪ್ಪು ಜಯಂತಿ ಆಚರಣೆ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಟಿಪ್ಪು ಜಯಂತಿ ಆಚರಣೆ ಜಾರಿಗೆ ತರಲಾಗಿತ್ತು. ತೀವ್ರ ವಿರೋಧದ ನಡುವೆಯೂ ಜಾರಿಗೊಳಿಸಲಾಗಿದ್ದ ಟಿಪ್ಪು ಜಯಂತಿ ಆಚರಣೆಯನ್ನು ಬಿಜೆಪಿ ಅಧಿಕಾರ ಅವಧಿಯಲ್ಲಿ ರದ್ದುಗೊಳಿಸಿ ಆದೇಶ ಹೊರಡಿಸಲಾಗಿತ್ತು.
2019ರಲ್ಲಿ ಟಿಪ್ಪು ಜಯಂತಿ ರದ್ದುಗೊಳಿಸಿದ ಆದೇಶವನ್ನು ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೂ ಹಿಂಪಡೆದುಕೊಂಡಿಲ್ಲ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಹೀಗಾಗಿ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಣೆ ಇರುವುದಿಲ್ಲ ಎಂದು ಹೇಳಲಾಗಿದೆ.