ಹೊಸ ದಿಗಂತ ವರದಿ, ದಾವಣಗೆರೆ:
ಲೋಕಾಯುಕ್ತ ಕಚೇರಿ ಹೆಸರಿನಲ್ಲಿ ನ್ಯಾಮತಿ ತಹಸೀಲ್ದಾರ್‌ಗೆ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕು ಸದಲಗ ಗ್ರಾಮದ ಮುರುಗೇಶ ಕುಂಬಾರ ಬಂಧಿತ ಆರೋಪಿ. ಹಾಲಿ ಮಹಾರಾಷ್ಟ್ರದ ಮೀರಜ್‌ನಲ್ಲಿ ವಾಸಿಸುತ್ತಿದ್ದ ಆರೋಪಿ ಮುರುಗೇಶನನ್ನು ನ್ಯಾಮತಿ ತಹಸೀಲ್ದಾರ್‌ಗೆ ಲೋಕಾಯುಕ್ತ ಕಚೇರಿ ಹೆಸರಿನಲ್ಲಿ ಬೆದರಿಕೆ ಕರೆ ಮಾಡಿದ್ದ ಆರೋಪದಡಿ ಪೊಲೀಸರು ಬಂಧಿಸಿ, ತನಿಖೆಗೆ ಒಳಪಡಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಬಂಧಿತ ಆರೋಪಿ ಮುರುಗೇಶ ಕುಂಬಾರ 2002ರಲ್ಲಿ ಕೆಲಸ ಕಳೆದುಕೊಂಡಿದ್ದ. ಆನಂತರ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಬೆದರಿಸಿ, ಹಣ ವಸೂಲಿ ಮಾಡುವುದನ್ನೇ ವೃತ್ತಿಯಾಗಿಸಿಕೊಂಡಿದ್ದ. ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದಾಗಿ ಆರೋಪಿ ಮುರುಗೇಶ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿ ಮುರುಗೇಶ ಕುಂಬಾರನ ವಿರುದ್ಧ 20ಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ. ಈ ಬಗ್ಗೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.