ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಡಿಯುವ ನೀರಿನ ಪೈಪ್‌ಲೈನ್‌ಗೆ ಚರಂಡಿ ನೀರು ಮಿಶ್ರಣವಾದ ಪರಿಣಾಮ, ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನ ಭಾಗೀರಥಪುರದಲ್ಲಿ ಸಂಭವಿಸಿದೆ. ಸಚಿವ ಕೈಲಾಶ್ ವಿಜಯವರ್ಗಿಯಾ ಅವರ ಕ್ಷೇತ್ರ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದ್ದು, ನೂರಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ್ದಾರೆ.
ಭಾಗೀರಥಪುರ ಪ್ರದೇಶದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಒಡೆದು, ಅದರೊಳಗೆ ಚರಂಡಿ ನೀರು ಸೇರಿಕೊಂಡಿತ್ತು. ಸಾರ್ವಜನಿಕ ಶೌಚಾಲಯದ ಕೆಳಭಾಗದಲ್ಲಿ ಸೋರಿಕೆ ಉಂಟಾಗಿದ್ದು, ಅಲ್ಲಿಂದಲೇ ಕೊಳಚೆ ನೀರು ಪೂರೈಕೆಯ ಪೈಪ್‌ಗೆ ನುಗ್ಗಿದೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ನಿವಾಸಿಗಳು ಮೊದಲೇ ದೂರು ನೀಡಿದ್ದರೂ, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಇಂದು ಈ ಭೀಕರ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೀವ್ರ ವಾಂತಿ ಮತ್ತು ಅತಿಸಾರದಿಂದ ಬಳಲುತ್ತಿದ್ದ 75 ವರ್ಷದ ನಂದಲಾಲ್ ಪಾಲ್ ಸೇರಿದಂತೆ ಒಟ್ಟು ಮೂವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಮಾರು 150ಕ್ಕೂ ಹೆಚ್ಚು ಜನರು ಅನಾರೋಗ್ಯಕ್ಕೆ ತುತ್ತಾಗಿದ್ದು, ಪ್ರಸ್ತುತ ನಗರದ ವಿವಿಧ ಆಸ್ಪತ್ರೆಗಳಲ್ಲಿ 100ಕ್ಕೂ ಹೆಚ್ಚು ನಿವಾಸಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲಾಧಿಕಾರಿ ಶಿವಂ ವರ್ಮಾ ಅವರು ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸುತ್ತಿದ್ದು, ಘಟನೆಗೆ ಕಾರಣರಾದವರ ವಿರುದ್ಧ ತನಿಖೆ ನಡೆಸಲು ಆದೇಶಿಸಿದ್ದಾರೆ.

