ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆ ಬದಿ ಕೆಟ್ಟು ನಿಂತಿದ್ದ ವಾಹನ ರಿಪೇರಿ ಮಾಡುವ ವೇಳೆ ಹಿಂದಿನಿಂದ ಬಂದ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಸೇಡಂ ತಾಲೂಕಿನ ಇವಣಿ ಗ್ರಾಮದ ಬಳಿ ಗುರುವಾರ ರಾತ್ರಿ ನಡೆದಿದೆ.
ಬೀದರ್ ಹಾಗೂ ಹೈದರಾಬಾದ್ ಮೂಲದ ವಿಠಲ್, ಮಂಗ್ಲಿ ಹಾಗೂ ಪ್ರಶಾಂತ್ ಮೃತ ದುರ್ದೈವಿಗಳು.
ಮೃತರು ಕಲಬುರಗಿಯಿಂದ ಸೇಡಂ ಮಾರ್ಗವಾಗಿ ಹೈದರಾಬಾದ್ಗೆ ತೆರಳತ್ತಿದ ವೇಳೆ ಮಾರ್ಗಮಧ್ಯೆ ಇವಣಿ ಗ್ರಾಮದ ಬಳಿ ಏಕಾಏಕಿ ಇವರ ವಾಹನ ಕೆಟ್ಟು ನಿಂತಿತ್ತು. ಈ ಹಿನ್ನೆಲೆಯಲ್ಲಿ ರಸ್ತೆ ಬದಿ ನಿಲ್ಲಿಸಿ ರಿಪೇರಿ ಮಾಡುತ್ತಿದ್ದರು. ಇದೇ ವೇಳೆ ಹಿಂದಿನಿಂದ ವೇಗವಾಗಿ ಬಂದ ಸಿಮೆಂಟ್ ಟ್ಯಾಂಕರ್ ಇವರಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತ ಸಂಬಂಧ ಮಾಡಬೂಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.