Sunday, October 12, 2025

ಮಲೆ ಮಹದೇಶ್ವರ ಅರಣ್ಯದಲ್ಲಿ ಹುಲಿ ಹತ್ಯೆ: ಶಂಕಿತ ಆರೋಪಿಯ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಹುಲಿ ಹತ್ಯೆ ಆಗಿರುವ ಹಿನ್ನೆಲೆಯಲ್ಲಿ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಸ್ಥಳೀಯರೊಂದಿಗೆ ಸಭೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ರಾಜ್ಯದ ಎಲ್ಲ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಮೈಸೂರು ವಿಭಾಗದ ಅರಣ್ಯಾಧಿಕಾರಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ ಸಚಿವರು, ಈಗಾಗಲೇ ವನ್ಯಜೀವಿ ಮಂಡಳಿ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅಂತಿಮ ವರದಿ ಸಲ್ಲಿಸಲು ತಿಳಿಸಿದರು.

ಅರಣ್ಯ ಪ್ರದೇಶದೊಳಗೆ ಇರುವ ಹಾಡಿಗಳಲ್ಲಿರುವ ದನಕರುಗಳೆಷ್ಟು, ಈ ಹಾಡಿಗಳಲ್ಲಿ ಎಷ್ಟು ಜನರಿದ್ದಾರೆ ಎಂಬ ಬಗ್ಗೆ ಸಂಪೂರ್ಣ ದತ್ತಾಂಶ ಕಲೆ ಹಾಕಿ ದಾಖಲಿಸಲು ಮತ್ತು ಒಂದೊಮ್ಮೆ ಹಾಡಿಯಲ್ಲಿರುವ ದನಕರುಗಳು ವನ್ಯಜೀವಿಯಿಂದ ಮೃತಪಟ್ಟರೆ ಪರಿಹಾರ ನೀಡಲು ಕ್ರಮ ವಹಿಸುವಂತೆ ಸೂಚಿಸಿದರು.

ಶಂಕಿತ ಆರೋಪಿ ವಶಕ್ಕೆ:
ಹುಲಿಯನ್ನು ಮೂರು ಭಾಗವಾಗಿ ಕತ್ತರಿಸಿ ಹತ್ಯೆ ಮಾಡಿರುವ ಪ್ರಕರಣದ ಶಂಕಿತ ಆರೋಪಿಯ ಪತ್ತೆಯಾಗಿದ್ದು, ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆದಿದ್ದು, ಶೀಘ್ರವೇ ಹುಲಿ ಹತ್ಯೆಗೆ ನೈಜ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಮಲೆ ಮಹದೇಶ್ವರ ಅರಣ್ಯ ಭಾಗದಲ್ಲಿ ಗಸ್ತು ಹೆಚ್ಚಿಸಲು ಸೂಚಿಸಿದ ಸಚಿವರು, ಅಧಿಕಾರಿಗಳು ಕರ್ತವ್ಯಲೋಪ ಎಸಗಿದ್ದರೆ ಕ್ರಮಕ್ಕೆ ಶಿಫಾರಸು ಮಾಡುವಂತೆ ಹಾಗೂ 5 ಹುಲಿ ಹಾಗೂ ಮೊನ್ನೆ ನಡೆದಿರುವ ಹುಲಿ ಹತ್ಯೆಯ ಆರೋಪಿಗಳಿಗೆ ಶೀಘ್ರ ಶಿಕ್ಷೆ ಕೊಡಿಸಲು ಕ್ರಮಕೈಗೊಂಡು ಸ್ಪಷ್ಟ ಸಂದೇಶ ರವಾನಿಸಲು ಸೂಚಿಸಿದರು.

error: Content is protected !!