ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ವನ್ಯಜೀವಿ ಸಂರಕ್ಷಣೆ ಗಂಭೀರ ಸವಾಲಾಗಿ ಪರಿಣಮಿಸುತ್ತಿದೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಹುಲಿಗಳ ಹತ್ಯೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು, ಇದು ಆತಂಕ ಮೂಡಿಸಿದೆ. ಈ ವರ್ಷದಲ್ಲೇ 6 ಹುಲಿಗಳು ಹತ್ಯೆಗೆ ಬಲಿಯಾಗಿರುವುದನ್ನು ಉಲ್ಲೇಖಿಸಿ, ಮೈಸೂರು ಸಂಸದ ಯದುವೀರ್ ಒಡೆಯರ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಮತ್ತೊಂದು ಹೆಣ್ಣು ಹುಲಿಯನ್ನು ದುಷ್ಕರ್ಮಿಗಳು ಕ್ರೂರವಾಗಿ ಕೊಲೆ ಮಾಡಿದ್ದಾರೆ. ಇತ್ತೀಚಿಗೆ ಇದೇ ಪ್ರದೇಶದಲ್ಲಿ 5 ಹುಲಿಗಳಿಗೆ ವಿಷಹಾಕಿ ಕೊಲೆ ಮಾಡಲಾಗಿತ್ತು. ಅದರ ಬೆನ್ನಲ್ಲೇ ಮತ್ತೊಂದು ಹತ್ಯೆ ನಡೆದಿರುವುದು ಅತ್ಯಂತ ನೋವಿನ ಸಂಗತಿ ಎಂದು ಯದುವೀರ್ ಸಾಮಾಜಿಕ ಜಾಲತಾಣದಲ್ಲಿ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ವರ್ಷದೊಳಗೆ 6 ಹುಲಿಗಳ ಹತ್ಯೆ ನಡೆದಿದ್ದರೂ, ಸರ್ಕಾರದಿಂದ ಪರಿಣಾಮಕಾರಿ ಕ್ರಮ ಕೈಗೊಳ್ಳದಿರುವುದು ಬೇಸರ ತಂದಿದೆ ಎಂದು ಸಂಸದರು ಆರೋಪಿಸಿದ್ದಾರೆ. ಹಿಂದಿನ ಘಟನೆಗಳಿಂದ ಪಾಠ ಕಲಿಯದೆ, ಮತ್ತೆ ಇದೇ ರೀತಿಯ ಅಪರಾಧಗಳು ನಡೆಯುತ್ತಿರುವುದು ವಿಷಾದನೀಯ ಎಂದಿದ್ದಾರೆ.
ವನ್ಯಜೀವಿ ಸಂರಕ್ಷಣೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೇ ಸರ್ಕಾರ ಗಟ್ಟಿಯಾದ ಕ್ರಮ ಕೈಗೊಳ್ಳಬೇಕು ಎಂದು ಯದುವೀರ್ ಆಗ್ರಹಿಸಿದ್ದಾರೆ. ತಪ್ಪಿತಸ್ಥರನ್ನು ಪತ್ತೆಹಚ್ಚಿ ಕಾನೂನಿನ ಮುಂದೆ ನಿಲ್ಲಿಸುವಂತೆ ಅವರು ಒತ್ತಾಯಿಸಿದ್ದಾರೆ.