ಹೊಸದಿಗಂತ ವರದಿ ಬೆಳಗಾವಿ :
ರಾಜ್ಯ ಬಿಜೆಪಿಯಲ್ಲಿ ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳು ಹಾಗೂ ಚುನಾವಣಾ ಫಲಿತಾಂಶಗಳ ಹಿನ್ನೆಲೆಯಲ್ಲಿ ಪಕ್ಷದೊಳಗಿನ ಸ್ಥಿತಿಗತಿಗಳ ಕುರಿತು ಶಾಸಕ ಅರವಿಂದ್ ಬೆಲ್ಲದ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷದ ಸಂಘಟನೆ ಮತ್ತಷ್ಟು ಬಲಪಡಿಸಲು ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಭಾನುವಾರ ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಸಂಘಟನೆ ಮತ್ತು ಇತ್ತೀಚಿನ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಹೈಕಮಾಂಡ್ ನಾಯಕರು ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ ಎಂದು ಹೇಳಿದರು. ಪಕ್ಷದಲ್ಲಿರುವ ಲೋಪದೋಷಗಳನ್ನು ಗುರುತಿಸಿ ಸರಿಪಡಿಸಿಕೊಂಡು ಮುನ್ನಡೆಯುವುದು ಈಗಿನ ಅಗತ್ಯವಾಗಿದ್ದು, ಇದು ಎಲ್ಲರಿಗೂ ಆತ್ಮಾವಲೋಕನದ ಸಮಯವಾಗಿದೆ ಎಂದು ಹೇಳಿದರು.
ರಾಜ್ಯ ಬಿಜೆಪಿ ಅಧ್ಯಕ್ಷರು ಪಕ್ಷದ ಎಲ್ಲ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಸಾಗುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹೈಕಮಾಂಡ್ ಸೂಚನೆಗಳಿಗೆ ಅನುಗುಣವಾಗಿ ಅಗತ್ಯ ಬದಲಾವಣೆಗಳು ಅಥವಾ ಮಹತ್ವದ ತೀರ್ಮಾನಗಳು ಹೊರಬೀಳುವ ಸಾಧ್ಯತೆಯಿದೆ ಎಂದು ಶಾಸಕ ಬೆಲ್ಲದ್ ಹೇಳಿದರು.
ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವತ್ತ ಗಮನ ಹರಿಸಬೇಕಿದೆ ಎಂದು ಅವರು ಕರೆ ನೀಡಿದರು.



