ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದ ಬೆನ್ನಲ್ಲೇ ಪ್ರತಿಪಕ್ಷ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆಗಿಳಿದಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಆಗ್ರಹಿಸಿದೆ.
ಗುರುವಾರ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ರಾಜ್ಯ ಬಿಜೆಪಿ ಪ್ರತಿಭಟನೆ ನಡೆಸಲಿದೆ.
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು, ಎಂಎಲ್‌ಸಿಗಳು ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.
ಮುಡಾ ಪ್ರಕರಣ ಮತ್ತು ಎಸ್‌ಟಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ನಡೆದಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಹಾಗೂ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸುತ್ತೇವೆಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.
ನ್ಯಾಯಾಲಯದ ತೀರ್ಪು ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಮುಖ್ಯಮಂತ್ರಿಗಳು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಮತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.