ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಜೋರು ಮಳೆ ಆರಂಭವಾಗಿದೆ. ಅದರಲ್ಲಿಯೂ ಕರಾವಳಿ ಭಾಗವಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು ಈ ಮೂರು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜು.12ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ, ಕ್ರಮೇಣ ಮಳೆ ಪ್ರಮಾಣ ಕಡಿಮೆಯಾಗಲಿದ್ದು, ಜು.10 ಮತ್ತು 11ರಂದು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಜತೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ ತಾಲೂಕಿನ ಶಾಲಾ ಕಾಲೇಜಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.