ಪ್ರವಾಸಿಗರೇ ಗಮನಿಸಿ: ಚಾರಣ ಸ್ಥಳಗಳಿಗೆ ಭೇಟಿ ನೀಡಲು ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ಹೊಸದಿಗಂತ ವರದಿ,ಮಂಗಳೂರು:

ರಾಜ್ಯದ ಚಾರಣ ಸ್ಥಳಗಳಿಗೆ ಭೇಟಿ ನೀಡುವ ಪ್ರವಾಸಿಗರು ಇನ್ನುಮುಂದೆ ಆನ್‌ಲೈನ್ ಮೂಲಕ ನೋಂದಾಯಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಚಾರಣ ಸ್ಥಳಗಳಿಗೆ ಎಷ್ಟು ಮಂದಿಗೆ ಅವಕಾಶ ನೀಡಬಹುದು ಎಂಬಿತ್ಯಾದಿ ಅಧ್ಯಯನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ಅರಣ್ಯ ಇಲಾಖೆಗೆ ಸೂಚಿಸಲಾಗಿದೆ. ಈ ವರದಿ ಬಂದ ಬಳಿಕ ಅತಿ ಶೀಘ್ರದಲ್ಲಿ ಜಾರಿಗೊಳಿಸಲಾಗುವುದು ಎಂದರು.

ರಾಜ್ಯದಲ್ಲಿ ಚಾರಣಕ್ಕೆ ವಿಫುಲ ಅವಕಾಶವಿದೆ. ಪ್ರಕೃತಿ, ಪರಿಸರಕ್ಕೆ ಹಾನಿ ಆಗದ ರೀತಿಯಲ್ಲಿ ಆನ್‌ಲೈನ್ ಮೂಲಕ ಬುಕ್ಕಿಂಗ್ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗುವುದು. ಏಕ ಗವಾಕ್ಷಿ ಯೋಜನೆಯಡಿ ಎಲ್ಲ ಚಾರಣ ಪಥಗಳನ್ನೂ ಅಭಿವೃದ್ಧಿಪಡಿಸಲಾಗುವುದು. ಚಾರಣಿಗರಿಗೆ ಅಗತ್ಯ ಮೂಲಸೌಕರ್ಯ ಮತ್ತು ಸುರಕ್ಷತೆ ಒದಗಿಸಲಾಗುವುದು. ಚಾರಣ ಪಥಗಳ ಅಭಿವೃದ್ಧಿ ನಿಟ್ಟಿನಲ್ಲಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಅರಣ್ಯ ಇಲಾಖೆಯ ಭೂಮಿಯನ್ನು ಗುರುತಿಸಲು ಈಗಾಗಲೇ ಕಂದಾಯ ಮತ್ತು ಅರಣ್ಯ ಇಲಾಖೆಯ ಜಂಟಿ ಸರ್ವೆ ಕಾರ್ಯ ಆರಂಭವಾಗಿದೆ. ಅರಣ್ಯ ಒತ್ತುವರಿ, ಅದರಲ್ಲೂ ಮೀಸಲು ಅರಣ್ಯ ಒತ್ತುವರಿ ಮಾಡಿದರೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಕರಾವಳಿ ನಿಯಂತ್ರಣ ವಲಯ(ಸಿಆರ್‌ಝೆಡ್) ನಿಯಮ ಉಲ್ಲಂಘನೆ ಕುರಿತಂತೆ ವರದಿ ಸಿದ್ಧಪಡಿಸಲು ಅರಣ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಕರ್ನಾಟಕದ ಕರಾವಳಿ ತೀರದಲ್ಲಿ ನಿರ್ಮಾಣ ಮಾಡಲಾಗಿರುವ ಕಟ್ಟಡಗಳ ಪಟ್ಟಿಯನ್ನು ಸಿದ್ಧಪಡಿಸಿ ಇವುಗಳಲ್ಲಿ ನಿಯಮ ಉಲ್ಲಂಘಿಸಿರುವವರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಈಶ್ವರ ಖಂಡ್ರೆ ತಿಳಿಸಿದರು.

ಕರಾವಳಿಯ ಕಡಲತೀರ ಪ್ರದೇಶಗಳಲ್ಲಿ ಕಡಲ್ಕೊರೆತ ತಡೆಯಲು ಕಾಂಡ್ಲಾ ವನ (ಮ್ಯಾಂಗ್ರೋ)ಬೆಳೆಸುವಂತೆ ಮತ್ತು ಕಡಲ ತೀರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಶೇಖರಣೆ ಆಗದಂತೆ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ಇದೇ ಸಂದರ್ಭ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!