May 14, 2026
Thursday, May 14, 2026
spot_img

ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಕಡ್ಡಾಯ: ಡಾ.ಸಂಜಯ್ ಎಸ್.ಬಿಜ್ಜೂರ್ ಸೂಚನೆ

ಹೊಸದಿಗಂತ ವರದಿ ಚಿತ್ರದುರ್ಗ:

ಗಣಿಗಾರಿಕೆ ಪ್ರಭಾವಿತ ವಲಯಗಳಲ್ಲಿ ಅನುಷ್ಠಾನಗೊಳ್ಳಲಿರುವ ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳವುದು ಕಡ್ಡಾಯ ಎಂದು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್.ಬಿಜ್ಜೂರ್ ಹೇಳಿದರು.

ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ (ಗಣಿಗಾರಿಕೆಯ ಪ್ರಭಾವಕ್ಕೆ ಒಳಗಾದ ವಲಯಗಳಿಗೆ ಸಮಗ್ರ ಪರಿಸರ ಯೋಜನೆ) ಸಿಇಪಿಎಂಐಝಡ್ ಯೋಜನೆಯಡಿ ಕೈಗೊಳ್ಳಲಿರುವ ಕಾಮಗಾರಿ, ಯೋಜನೆಗಳ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಣಿಭಾದಿತ ಪ್ರದೇಶಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳಲಿರುವ ವಸತಿ ಯೋಜನೆಗಳಲ್ಲಿ ಯಾವುದೇ ರೀತಿಯ ಒತ್ತಡಗಳಿಗೆ ಮಣಿಯದೇ, ನೈಜ ಹಾಗೂ ಅರ್ಹ ಫಲಾನುಭವಿಗಳನ್ನು ಮಾತ್ರ ಆಯ್ಕೆ ಮಾಡಬೇಕು. ನೈಜ ಪರಿಸ್ಥಿತಿಯನ್ನು ಪರಿಶೀಲಿಸಿ, ಯಾರು ನಿಜವಾಗಿಯೂ ಮನೆಗೆ ಅರ್ಹರಿದ್ದಾರೋ ಅವರಿಗೆ ಮಾತ್ರ ಯೋಜನೆಯ ಲಾಭ ಸಿಗುವಂತೆ ನೋಡಿಕೊಳ್ಳಬೇಕು. ಈ ಕುರಿತು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಸತಿ ಯೋಜನೆಯನ್ನು ವ್ಯವಸ್ಥಿತವಾಗಿ ಜಾರಿಗೊಳಿಸಲು ನಿವೇಶನ ರಹಿತರು ಮತ್ತು ವಸತಿ ರಹಿತರ ವರ್ಗೀಕರಣ ಎಂದು ಎರಡು ಗುಂಪುಗಳಾಗಿ ವಿಂಗಡಿಸಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ರಹಿತರಾಗಿರುವವರಿಗೆ ಮೊದಲ ನಿವೇಶನ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದೆ. ಇದಕ್ಕಾಗಿ ಗ್ರಾಮದಿಂದ ಗರಿಷ್ಟ 2 ಕಿ.ಮೀ ವ್ಯಾಪ್ತಿಯೊಳಗೆ ಸೂಕ್ತವಾದ ಭೂಮಿಯನ್ನು ಗುರುತಿಸುವ ಪ್ರಕ್ರಿಯೆ ಚುರುಕುಗೊಳಿಸಬೇಕು. ಭೂಮಿ ಗುರುತಿಸಿದ ನಂತರ ಆ ನಿವೇಶನಗಳನ್ನು ಲೇಔಟ್ ಅನುಮೋದನೆಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರಸ್ತಾವನೆ ಸಲ್ಲಿಸಬೇಕು.

ಇದನ್ನೂ ಓದಿ:

ಹೊಸದಾಗಿ ನಿರ್ಮಿಸುವ ಲೇಔಟ್‌ಗಳಲ್ಲಿ ರಸ್ತೆಗಳು, ಕುಡಿಯುವ ನೀರಿನ ಸೌಲಭ್ಯ, ಬೀದಿ ದೀಪಗಳು ಹಾಗೂ ವಿದ್ಯುದ್ವೀಕರಣದಂತಹ ಎಲ್ಲಾ ರೀತಿಯ ಮೂಲ ಸೌಕರ್ಯಗಳನ್ನು ಹೊಂದಿರುವ ಸುಸಜ್ಜಿತ ಕಾಲೋನಿಗಳಾಗಬೇಕು. ಯೋಜನಾ ನಕ್ಷೆಯಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಅಂಗನವಾಡಿ ಕೇಂದ್ರಗಳ ಸ್ಥಾಪನೆಗೆ ಅಗತ್ಯವಿರುವ ಜಾಗವನ್ನು ಕಾಯ್ದಿರಿಸಿ, ಸಂಬಂಧಪಟ್ಟ ಇಲಾಖೆಗಳಿಂದ ಮಂಜೂರಾತಿ ಪಡೆದುಕೊಳ್ಳಬೇಕು.

ಹೊಸ ಕಾಲೋನಿಯ ಮುಖ್ಯ ಗ್ರಾಮದಿಂದ ಉತ್ತಮ ಸಂಪರ್ಕ ರಸ್ತೆಯನ್ನು ಕಲ್ಪಿಸು ಬಗ್ಗೆ ವಿಶೇಷ ಗಮನ ಹರಿಸಬೇಕು. ಯಾವುದೇ ಕಾರಣಕ್ಕೂ ಲೇಔಟ್‌ಗಳನ್ನು ಸ್ಮಶಾನಗಳ ಪಕ್ಕದಲ್ಲಿ ನಿರ್ಮಿಸಬಾರದು. ಅಂತಹ ಸ್ಥಳಗಳಲ್ಲಿ ಜನರು ವಾಸಿಸಲು ಹಿಂಜರಿಯುವುದರಿಂದ ಸೂಕ್ತವಾದ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷೆ ಸಲ್ಲದು. ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಕಾಮಗಾರಿಗಳ ಅನುಷ್ಠಾನದ ಹೊಣೆಗಾರಿಕೆ ಆಯಾ ಇಲಾಖಾ ಅಧಿಕಾರಿಗಳದ್ದೇ ಆಗಿದ್ದು, ಇದರಲ್ಲಿ ಯಾವುದೇ ರೀತಿಯ ವಿಳಂಬ ಹಾಗೂ ನಿರ್ಲಕ್ಷೆ ಮಾಡುವಂತಿಲ್ಲ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸರ್ಕಾರದ ಮಟ್ಟದಲ್ಲಿ ಮತ್ತು ನಿಗಮದ ವತಿಯಿಂದ ಯೋಜನೆಗಳ ಸಿದ್ದತೆ, ಅನುಮೋದನೆ ಹಾಗೂ ಅನುದಾನದ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಆದರೆ ಕ್ಷೇತ್ರ ಮಟ್ಟದಲ್ಲಿ ಇವುಗಳನ್ನು ಜಾರಿಗೆ ತರಬೇಕಾದವರು ಜಿಲ್ಲಾಮಟ್ಟದ ಅಧಿಕಾರಿಗಳಾಗಿದ್ದು, ನೀವುಗಳು ಯೋಜನೆಯ ಭಾಗವಾಗಿದ್ದು, ಪ್ರತಿಯೊಂದು ಹಂತವನ್ನೂ ಸೂಕ್ಷ್ಮವಾಗಿ ಗಮನಿಸಿ ಕೆಲಸ ಮಾಡಬೇಕು.

ಗಣಿಗಾರಿಕೆ ಪ್ರಭಾವಿತ ಪ್ರದೇಶಗಳಲ್ಲಿ ಆರೋಗ್ಯ ಸುಧಾರಣೆಗಾಗಿ ವಿಶೇಷ ಕಾರ್ಯಕ್ರಗಳ ಹಮ್ಮಿಕೊಂಡಿದ್ದು, ಕ್ಷಯ ರೋಗ ಪೀಡಿತರಿಗೆ ಪೌಷ್ಠಿಕ ಆಹಾರ ವಿತರಣೆ, ನವಜಾತ ಶಿಶುಗಳ ಆರೈಕೆ ಸೇರಿದಂತೆ ಹಲವು ಕಾರ್ಯಕ್ರಮಗಳ ರೂಪಿಸಿದ್ದು, ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ಸಂಬಂಧಪಟ್ಟ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದ ಅವರು ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಹೇಳಿದರು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !