ಪರ ವಿರೋಧ‌ ಚರ್ಚೆಗೆ ಗ್ರಾಸವಾದ ತ್ರಿಶೂಲ ದೀಕ್ಷೆ ಕಾರ್ಯಕ್ರಮ

ಹೊಸದಿಗಂತ ವರದಿ ಮಡಿಕೇರಿ:

ಪೊನ್ನಂಪೇಟೆಯ ಖಾಸಗಿ ಶಾಲಾ ಆವರಣವೊಂದರಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಆಯೋಜಿಸಲಾಗಿದ್ದ ತ್ರಿಶೂಲ ದೀಕ್ಷೆ ಕಾರ್ಯಕ್ರಮ ಇದೀಗ ಪರ ವಿರೋಧ ಚರ್ಚೆಗೆ ಗ್ರಾಸ ಒದಗಿಸಿದೆ. ಕಾರ್ಯಕ್ರಮದ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಮಡಿಕೇರಿ ನಗರಸಭಾ ಸದಸ್ಯ ಹಾಗೂ ಎಸ್‌ಡಿಪಿಐ ಮುಖಂಡ ಅಮೀನ್ ಮೊಹಿಸಿನ್ ಅವರು, ತ್ರಿಶೂಲ ದೀಕ್ಷೆಯ ಹೆಸರಿನಲ್ಲಿ ಹಿಂದೂ ಕಾರ್ಯಕರ್ತರಿಗೆ ನಿರ್ಜನ ಪ್ರದೇಶವೊಂದರಲ್ಲಿ ಶಸ್ತ್ರಾಸ್ತ್ರ ತರಬೇತಿ ನೀಡಲಾಗಿದೆ. ಸಮಾಜದ ಸಾಮರಸ್ಯವನ್ನು ಕದಡಲು ಈ ರೀತಿಯ ತರಬೇತಿಗಳನ್ನು ನೀಡಲಾಗುತ್ತಿದ್ದು, ಇದೊಂದು ಕಾನೂನು ಬಾಹಿರ ಚಟುವಟಿಕೆಯಾಗಿದೆ ಎಂದು ಟೀಕಿಸಿದ್ದಾರೆ.

ಪೊಲೀಸ್ ಇಲಾಖೆ ಒಂದು ಭಾಗಕ್ಕೆ ಸೀಮಿತವಾಗಿ ಕಾನೂನನ್ನು ಬಳಸುತ್ತಿದೆ ಎಂದು ಆರೋಪಿಸಿರುವ ಅವರು, ಗೃಹ ಇಲಾಖೆ ತಕ್ಷಣ ಕಠಿಣ ಕ್ರಮ ಕೈಗೊಂಡು ಸಂಭಾವ್ಯ ಅನಾಹುತವನ್ನು ತಪ್ಪಿಸಬೇಕೆಂದು ಒತ್ತಾಯಿಸಿದ್ದಾರೆ. ಶಸ್ತ್ರಾಸ್ತ್ರ ಕಾಯ್ದೆ ಉಲ್ಲಂಘಿಸಿ ತರಬೇತಿ ನೀಡಿರುವ ಉದ್ದೇಶವೇನು ಎಂದು ಪ್ರಶ್ನಿಸಿರುವ ಅಮೀನ್ ಮೊಹಿಸೀನ್ ಶಸ್ತ್ರಾಸ್ತ್ರ ತರಬೇತಿ ನೀಡಲು ಕಾರಣವೇನು ಎನ್ನುವುದನ್ನೂ ಬಹಿರಂಗ ಪಡಿಸಬೇಕೆಂದು ಆಗ್ರಹಿಸಿದ್ದಾರೆ.

ಕಠಿಣ ಕ್ರಮವಾಗಲಿ

ಮತ್ತೊಂದೆಡೆ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಬಿ.ಅಪ್ಸರ್ ಅವರು, ಶಸ್ತ್ರಾಸ್ತ್ರ ತರಬೇತಿ ನೀಡಿದ ಸಂಘಟನೆಗಳ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಖಂಡನೆ

ತ್ರಿಶೂಲ ದೀಕ್ಷೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಎಸ್‌ಡಿಪಿ‌ಐನ ಮಿತ್ರ ಪಕ್ಷವಾದ ಕಾಂಗ್ರೆಸ್, ಕೊಡಗು ಜಿಲ್ಲೆ ಮತ್ತು ಹಿಂದೂ ಧರ್ಮ ಶಾಂತಿ ಸಾಮರಸ್ಯಕ್ಕೆ ಹೆಸರಾಗಿದೆ. ಆದರೆ ಇತ್ತೀಚೆಗೆ ಪೊನ್ನಂಪೇಟೆಯಲ್ಲಿ ಶಸ್ತ್ರಾಸ್ತ್ರ ತರಬೇತಿಯಂತಹ ಉದ್ರೇಕಕಾರಿ ಚಟುವಟಿಕೆ ನಡೆದಿರುವ ಬಗ್ಗೆ ಮಾಹಿತಿಯಿದ್ದು, ಇದು ಖಂಡನೀಯವೆಂದು ಹೇಳಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರು ಈ ಸಂಬಂಧ ಹೇಳಿಕೆ‌ ನೀಡಿದ್ದು, ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸಲು ಪೊಲೀಸರು ಬುಡದಿಂದಲೇ ಈ ರೀತಿಯ ಬೆಳವಣಿಗೆಯನ್ನು ಚಿವುಟಬೇಕು. ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ‌.
ಅಶಾಂತಿಯ ವಾತಾವರಣ ಸೃಷ್ಟಿಗೆ ಯಾರೂ ಮುಂದಾಗಬಾರದು, ಕೊಡಗಿನ ಮಟ್ಟಿಗೆ ಇದು ಅಪಾಯಕಾರಿಯಾಗಿದ್ದು, ಮೂಲಭೂತವಾದಿಗಳ ಪ್ರಯತ್ನಗಳು ವಿಫಲವಾಗಲಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!