Friday, July 1, 2022

Latest Posts

ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ: ಸಚಿವ ಅರವಿಂದ ಲಿಂಬಾವಳಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………

ಹೊಸದಿಗಂತ ವರದಿ, ಮಂಗಳೂರು:

ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯೂನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಈ ಕ್ರಮದಿಂದಾಗಿ ತುಳು ಲಿಪಿಯು ಯೂನಿಕೋಡ್ ನಕಾಶೆಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗುವ ಕಾರ್ಯವು ವೇಗ ಪಡೆಯಲಿದೆ. ಸುಮಾರು ಹತ್ತು ವರ್ಷಗಳಿಂದ ತುಳು ಲಿಪಿಯನ್ನು ರೂಪಿಸುವ ಬಗ್ಗೆ ಹಲವು ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ತುಳು ಭಾಷಾ ಮತ್ತು ಲಿಪಿ ತಜ್ಞರು ಸರ್ವಾನುಮತಿಯಿಂದ ರೂಪಿಸಿದ ತುಳು ಲಿಪಿ ಪಟ್ಟಿಯನ್ನು ಅಕಾಡೆಮಿಯು ಅಂಗೀಕರಿಸಿ ಯೂನಿಕೋಡ್ ನಕಾಶೆಗೆ ಸೇರಿಸಲು ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತುಳು ಲಿಪಿ ಪಟ್ಟಿಯನ್ನು ಪರಾಮರ್ಶಿಸಿ ಅನುಮೋದಿಸಲು ಮೈಸೂರಿನಲ್ಲಿರುವ ಕೇಂದ್ರ ಸರಕಾರದ ಭಾರತೀಯ ಭಾಷಾ ಸಂಸ್ಥಾನಕ್ಕೆ ಕರ್ನಾಟಕ ಸರಕಾರದಿಂದ ಕೋರಲಾಗಿತ್ತು.
ಭಾಷಾ ಸಂಸ್ಥಾನವು ಇದಕ್ಕಾಗಿ ಭಾಷಾ ತಜ್ಞರ ಸಮಿತಿ ರಚಿಸಿ, ಚರ್ಚಿಸಿ ಲಿಪಿ ಪಟ್ಟಿಯನ್ನು ಅನುಮೋದಿಸಿ, ಯೂನಿಕೋಡ್ ಕನ್ಸಾರ್ಶಿಯಂಗೆ ಸಲ್ಲಿಸಲು ಶಿಫಾರಸು ಮಾಡಿತು. ಅದರಂತೆ ಈಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತುಳು ಅಕಾಡೆಮಿಗೆ ಪತ್ರ ಬರೆಯಲಾಗಿದೆ. ಯೂನಿಕೋಡ್ ನಕಾಶೆಗೆ ಸೇರಿಸಲು ಅಗತ್ಯವಿರುವ ಇನ್ನಿತರ ತಾಂತ್ರಿಕ ಅಂಶಗಳ ಬಗ್ಗೆಯೂ ಗಮನ ನೀಡುವಂತೆ ತಿಳಿಸಲಾಗಿದೆ ಎಂದು ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಡಿಜಿಟಲ್ ವೇದಿಕೆಗಳಲ್ಲಿ, ಮುದ್ರಿತ ಸಾಹಿತ್ಯದಲ್ಲಿ, ಪ್ರಚಾರ ಸಾಹಿತ್ಯದಲ್ಲಿ – ಹೀಗೆ ತುಳು ಲಿಪಿಯು ಹೆಚ್ಚು ಹೆಚ್ಚು ಬಳಕೆಗೆ ಬಂದರೆ ಲಿಪಿಯನ್ನು ರೂಪಿಸಿದ್ದಕ್ಕೆ ನ್ಯಾಯ ಒದಗಿಸಿದಂತಾಗುತ್ತದೆ. ಕರ್ನಾಟಕದ ಇತಿಹಾಸದಲ್ಲಿ ಒಂಬತ್ತು ಶತಮಾನಗಳ ಅತಿದೀರ್ಘವಾದ ಆಡಳಿತವನ್ನು ನಡೆಸಿದ ಖ್ಯಾತಿಯನ್ನು ಹೊಂದಿದ ತುಳು ಸಂಸ್ಕೃತಿಯ ಪ್ರತೀಕವಾದ ತುಳು ಲಿಪಿಯು ಯೂನಿಕೋಡ್‌ಗೆ ಸೇರುತ್ತಿರುವುದಕ್ಕೆ ಲಕ್ಷಾಂತರ ತುಳು ಭಾಷಿಗರು ತೋರಿದ ಸಂಭ್ರಮದಲ್ಲಿ ಭಾಗಿಯಾಗಲು ನನಗೂ ಹರ್ಷವಾಗುತ್ತಿದೆ ಎಂದು ಸಚಿವರು ತಮ್ಮ ಸಂತಸ ಹಂಚಿಕೊಂಡಿದ್ದಾರೆ.
ಕನ್ನಡ ನಾಡಿನ ಉಳಿದೆಲ್ಲ ಭಾಷೆಗಳಂತೆಯೇ ತುಳು ಭಾಷೆ, ಸಂಸ್ಕೃತಿಯ ಉಳಿವು, ಬೆಳವಣಿಗೆಗಾಗಿ ನಮ್ಮ ಸರಕಾರದ ಪ್ರಯತ್ನವು ನಿರಂತರವಾಗಿ ನಡೆಯುತ್ತದೆ ಎಂದು ಸಚಿವ ಲಿಂಬಾವಳಿ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss