Sunday, December 3, 2023

Latest Posts

ಎರಡು ಬಾರಿ ಸಿಎಂ ಆದ್ರೂ ಸಿದ್ದರಾಮಯ್ಯಗೆ ಸರ್ಕಾರ ನಡೆಸೋಕೆ ಬರ್ತಿಲ್ಲ: ಕಟೀಲ್

ದಿಗಂತ ವರದಿ ವಿಜಯಪುರ:

ಎರಡು ಬಾರಿ ಮುಖ್ಯಮಂತ್ರಿಯಾದರೂ ಸಿದ್ದರಾಮಯ್ಯ ಅವರಿಗೆ ಆಡಳಿತ ನಡೆಸಲು ಬರುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಟೀಕಿಸಿದರು.

ಬರ ಅಧ್ಯಯನ ಹಿನ್ನೆಲೆ ಜಿಲ್ಲೆಯ ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದ ರೈತ ಬಿಳಿಯನ ಸಿದ್ದ ಒಡೆಯರ್, ಅನಿಲ್‌ ಲಮಾಣಿ ಅವರ ಮೆಕ್ಕೆ ಜೋಳದ ಹೊಲಕ್ಕೆ ಶನಿವಾರ ಮುಖಂಡರ ನೇತೃತ್ವದಲ್ಲಿ ಬೆಳೆ ಹಾನಿ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಅತಿವೃಷ್ಟಿ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಪರಿಹಾರ ಹಣಕ್ಕೆ ಕಾಯದೇ, ಎನ್ ಡಿಆರ್ ಎಫ್ ಮಾರ್ಗಸೂಚಿ ಮೀರಿ ತಕ್ಷಣ ಸಂತ್ರಸ್ತ ರೈತರಿಗೆ ಪರಿಹಾರ ಕೊಟ್ಟಿದ್ದರು. ಇದೇ ರೀತಿ ಸಿದ್ದರಾಮಯ್ಯ ನವರು ರೈತರಿಗೆ ಸೂಕ್ತ ಪರಿಹಾರ ತಕ್ಷಣವೇ ಒದಗಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ತನ್ನ ಸರ್ಕಾರ ಉಳಿಸಿಕೊಳ್ಳಲು ಪ್ರಯತ್ನ ನಡೆಸಿದೆಯೇ ಹೊರತು, ರೈತರ ಹಿತ ಕಾಪಾಡಾಲು ಯೋಚಿಸುತ್ತಿಲ್ಲ, ಸರ್ಕಾರದ ವಿರುದ್ಧ ಜನರ ಆಕ್ರೋಶ ಹೆಚ್ಚಾಗಿದೆ ಎಂದರು. ಸಿದ್ದರಾಮಯ್ಯ ರಾಜಕಾರಣ ಮಾಡುತ್ತಿದ್ದಾರೆ. ರೈತರ ಹಿತ ರಕ್ಷಣೆ ಮಾಡುತ್ತಿಲ್ಲ, ಕುರ್ಚಿ ಹಿತ ರಕ್ಷಣೆ ಮಾಡುತ್ತಿದ್ದಾರೆ ಎಂದರು.

ಬರದ ವಿಷಯದಲ್ಲಿ ಕೇಂದ್ರ ಸರ್ಕಾರ ರಾಜಕಾರಣ ಮಾಡಿಲ್ಲ, ಈಗಾಗಲೇ ಅಧಿಕಾರಿಗಳ ತಂಡವನ್ನು ರಾಜ್ಯಕ್ಕೆ ಕಳುಹಿಸಿ, ಅಧ್ಯಯನ ಮಾಡಿಸಿದೆ. ಆದರೆ, ರಾಜ್ಯ ಸರ್ಕಾರ ಬರದಿಂದ ಎಷ್ಟು ನಷ್ಠವಾಗಿದೆ ಎಂಬ ಬಗ್ಗೆ ಇನ್ನೂ ವರದಿ ಕೊಟ್ಟಿಲ್ಲ ಎಂದು ಆರೋಪಿಸಿದರು. ಅಧಿಕಾರಿಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನಿರ್ಲಕ್ಷ್ಯ ದಿಂದ ತಿಕೋಟಾ ತಾಲೂಕನ್ನು ಬರಗಾಲ ಪಟ್ಟಿಯಿಂದ ಹೊರಗಿಟ್ಟಿದ್ದಾರೆ ಎಂದು ದೂರಿದರು.

ಪ್ರಭಾವಿ ಸಚಿವರ ಕ್ಷೇತ್ರವಾದ ತಿಕೋಟವನ್ನೇ ಬರ ಪೀಡಿತ ಎಂದು ಘೋಷಣೆ ಮಾಡುವ ಯೋಗ್ಯತೆ ಇಲ್ಲ ಎಂದು ಲೇವಡಿ ಮಾಡಿದರು. ಸಚಿವರು ಇದುವರೆಗೂ ರೈತರ ಅಹವಾಲು ಆಲಿಸಿಲ್ಲ. ಬರದಿಂದ ಇದುವರೆಗೆ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ನೀಡಿಲ್ಲ ಎಂದರು.

ಬಿಜೆಪಿ ರಾಜ್ಯದಾದ್ಯಂತ ಸಂಚರಿಸಿ ಬರ ಅಧ್ಯಯನ ಮಾಡಿದ ಬಳಿಕ ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಿ, ಬಳಿಕ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ. ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಕೋರುತ್ತೇವೆ ಎಂದರು.

ರಾಜ್ಯ ಸರ್ಕಾರ ಸಮರ್ಪಕವಾಗಿ ವಿದ್ಯುತ್ ನೀಡಿದ್ದಿರೆ ರೈತರು ಬೆಳೆದ ತಮ್ಮ ಅಲ್ಪಸ್ವಲ್ಪ ಬೆಳೆ ರಕ್ಷಣೆ ಮಾಡಿಕೊಳ್ಳುತ್ತಿದ್ದರು. ಸಮರ್ಪಕವಾಗಿ ವಿದ್ಯುತ್‌ ನೀಡದ ಕಾರಣ ಪೂರ್ಣ ಪ್ರಮಾಣದಲ್ಲಿ ಕೃಷಿ ನಷ್ಟವಾಗಿದೆ ಎಂದು ಆರೋಪಿಸಿದರು.

ಸಂಸದ ರಮೇಶ ಜಿಗಜಿಣಗಿ, ಪಿ.ಸಿ. ಗದ್ದಿಗೌಡರ, ಶಾಸಕ ಸಿದ್ದು ಸವದಿ, ಮಾಜಿ ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ರಮೇಶ ಭೂಸನೂರ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಉಪಾಧ್ಯಕ್ಷ ಉಮೇಶ ಕಾರಜೋಳ, ಮುಖಂಡರಾದ ವಿಜುಗೌಡ ಪಾಟೀಲ, ಉಮೇಶ ಕೋಳಕೂರ ಮತ್ತಿತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!