ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.
ಮೃತರನ್ನು ಮನು (19) ಮತ್ತು ಪ್ರಜ್ವಲ್ (18) ಎಂದು ಗುರುತಿಸಲಾಗಿದೆ. ಘಟನೆ ನಡೆದ ವೇಳೆ ಮೂವರು ಸಹೋದರರು ತಮ್ಮ ತಂದೆಯೊಂದಿಗೆ ನದಿಗೆ ಈಜಲು ಹೋಗಿದ್ದರು. ಈ ಸಂದರ್ಭ ಮನು ಮತ್ತು ಪ್ರಜ್ವಲ್ ಅಕಸ್ಮಾತ್ ನೀರಿನ ಪ್ರವಾಹದಲ್ಲಿ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.
ಇದನ್ನೂ ಓದಿ:
ಸ್ಥಳದಲ್ಲಿದ್ದ ತಂದೆ ಮಂಜಪ್ಪ ಅವರು ತಕ್ಷಣ ಕಿರಿಯ ಮಗ ಚಿರಂಜೀವಿಯನ್ನು ರಕ್ಷಿಸಲು ಯಶಸ್ವಿಯಾಗಿದ್ದಾರೆ. ಆದರೆ ಇಬ್ಬರು ಹಿರಿಯ ಪುತ್ರರನ್ನು ಉಳಿಸಲು ಸಾಧ್ಯವಾಗಲಿಲ್ಲ. ತಂದೆಯ ಕಣ್ಣೆದುರಲ್ಲೇ ನಡೆದ ಈ ದುರ್ಘಟನೆ ಕುಟುಂಬದವರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಹೊರತೆಗೆದು ನಂತರ ಕಾನೂನು ಪ್ರಕ್ರಿಯೆ ಕೈಗೊಳ್ಳಲಾಗಿದೆ.
ಈ ಸಂಬಂಧ ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.



