ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ ಆಗಿದೆ. ನಿನ್ನೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಇಂದು ಮಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವಂತಹ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರದಲ್ಲಿ ನಡೆದಿದೆ. ಪ್ರೇಮಾ(59) ಮೃತ ಮಹಿಳೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚನ್ನಪಟ್ಟಣದ ಉಜ್ಜೀವನ್ ಬ್ಯಾಂಕ್ನಲ್ಲಿ 6 ಲಕ್ಷ ರೂ. ಸಾಲ ಪಡೆದಿದ್ದರು. 3 ತಿಂಗಳ ಕಂತು ಕಟ್ಟದ ಹಿನ್ನೆಲೆ 1 ವಾರದ ಹಿಂದೆಯಷ್ಟೇ ಪ್ರೇಮಾ ಮನೆ ಸೀಜ್ ಮಾಡಲಾಗಿತ್ತು. ಹೀಗಾಗಿ ಮನನೊಂದು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಇಂದು ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಪ್ರೇಮಾ ಮೃತಪಟ್ಟಿದ್ದಾರೆ. ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತದೇಹ ಶವಗಾರಕ್ಕೆ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರಿಸಲಿದ್ದಾರೆ.
ಹಾಸನ ಜಿಲ್ಲೆ ಆಲೂರು ತಾಲೂಕಿನ ಬಂಡಿತಿಮ್ಮನಹಳ್ಳಿಯಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಆರೋಪ ಹಿನ್ನಲ್ಲೆ ರೈತ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ರೈತ ಹೇಮಂತ್(52) ಮೃತ ವ್ಯಕ್ತಿ.
ವಿವಿಧ ಸಂಘಗಳಲ್ಲಿ ಪತ್ನಿ ಹೆಸರಿನಲ್ಲಿ 2 ಲಕ್ಷ ರೂ. ಸಾಲ ಮಾಡಿದ್ದರು. ಆದರೆ ಕಿರುಕುಳಕ್ಕೆ ಬೇಸತ್ತು ವಿಷಸೇವಿಸಿದ್ದಾರೆ. ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.