ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರೀ ಸಂಚಲನ ಮೂಡಿಸಿರುವ ಬೆಳ್ಳಾರೆಯ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇನ್ನಿಬ್ಬರನ್ನು ಬೆಂಗಳೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಕೆ.ಜೆ ಹಳ್ಳಿಯಲ್ಲಿ ಅಡಗಿದ್ದ ಸುಳ್ಯ ಮೂಲದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನಲ್ಲಿ ಅಡಗಿ ಕುಳಿತಿದ್ದ ಸುಳ್ಯ ಮೂಲದ ಇರ್ಫಾನ್ ಮತ್ತು ಅಲ್ತಾಫ್ ಎಂಬವರನ್ನು ಜು.31ರಂದು ರಾತ್ರಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಶಂಕಿತರು ಇದ್ದ ಮನೆಯನ್ನು ಸುತ್ತುವರಿದ ಪೊಲೀಸ್ ತಂಡ ಮಧ್ಯರಾತ್ರಿ ಆರೋಪಿಗಳನ್ನು ಬಂಧಿಸಿ ಮಂಗಳೂರಿಗೆ ಕರೆತಂದಿರುವುದಾಗಿ ದೃಶ್ಯ ಮಾಧ್ಯಮಗಳಲ್ಲಿ ವರದಿಯಾಗಿದೆ. ಬೆಂಗಳೂರಿನಲ್ಲಿ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಮಂಗಳೂರಿಗೆ ಕರೆತಂದಿದ್ದಾರೆ. ಮೊಬೈಲ್ ನೆಟ್‌ವರ್ಕ್ ಆಧರಿಸಿ ಈ ಕಾರ್ಯಾಚರಣೆ ನಡೆದಿದೆ ಎಂದೂ ಹೇಳಲಾಗುತ್ತಿದೆ. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿ ಹೊಸದಾಗಿ ಯಾರನ್ನೂ ಬಂಧಿಸಲಾಗಿಲ್ಲ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಸ್ಪಷ್ಟನೆ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿತರಾಗಿರುವ ಬೆಳ್ಳಾರೆಯ ಶಫೀಕ್ ಹಾಗೂ ಸವಣೂರಿನ ಝಾಕಿರ್ ಎಂಬೀರ್ವರನ್ನು ನ್ಯಾಯಾಂಗ ಬಂಧನದಿಂದ ಕಸ್ಟಡಿಗೆ ಪಡೆದುಕೊಂಡಿರುವ ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ. ಬಂಧಿತ ಶಫೀಕ್ ಮತ್ತು ಝಾಕಿರ್ ನೀಡಿರುವ ಮಾಹಿತಿ ಆಧರಿಸಿ ಬೆಂಗಳೂರಿನಲ್ಲಿ ಇರ್ಫಾನ್ ಹಾಗೂ ಅಲ್ತಾಫ್ ನನ್ನು ಪೊಲೀಸರ ತಂಡ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ ಎನ್ನಲಾಗಿದೆ.