April 4, 2026
Saturday, April 4, 2026
spot_img

ಶಾಲಾ ಅವಧಿ ಮುಗಿಸಿ ಕೆರೆಗೆ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಜಲಸಮಾಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಾಲಾ ಅವಧಿ ಮುಗಿಸಿ ಸಂಭ್ರಮದಿಂದ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಗದಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ನಡೆದಿದೆ.

ಚಿಂಚಲಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳು ಇಂದು ಶಾಲೆ ಮುಗಿದ ನಂತರ ಗ್ರಾಮದ ಕೆರೆಗೆ ಈಜಲು ತೆರಳಿದ್ದರು. ಈ ಸಂದರ್ಭದಲ್ಲಿ ನೀರಿನ ಆಳ ತಿಳಿಯದೇ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿದ್ದಾರೆ.

ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಪರಶುರಾಮ ವಡ್ಡರ ಹಾಗೂ ಬೆಳದಡಿ ಗ್ರಾಮದ ಬಸವರಾಜ ಬಡಿಗೇರ ಮೃತಪಟ್ಟ ದುರ್ದೈವಿಗಳು. ಅದೃಷ್ಟವಶಾತ್ ಮತ್ತೋರ್ವ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಘಟನೆ ಸಂಭವಿಸಿದ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತಾದರೂ, ಅಧಿಕಾರಿಗಳು ಸಕಾಲಕ್ಕೆ ಸ್ಥಳಕ್ಕೆ ಆಗಮಿಸಿಲ್ಲ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಾರು 20 ಅಡಿ ಆಳವಿರುವ ಕೆರೆಯಲ್ಲಿ ಸ್ಥಳೀಯ ಈಜುಗಾರರು ಮತ್ತು ಮುಳುಗು ತಜ್ಞರು ಮೃತದೇಹಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಈ ಕುರಿತು ಮಾಹಿತಿ ಪಡೆದ ಮುಳಗುಂದ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !