ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಒಳನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭಾರತೀಯ ಸೇನೆಯು ಹತ್ಯೆಗೈದಿದೆ.
ಈ ಕುರಿತು ಸೇನಾಧಿಕಾರಿಗಳು ಮಾಹಿತಿ ನೀಡಿದ್ದು, ಸೋಮವಾರ ಬಾಲಾಕೋಟ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ ಇಬ್ಬರು ಭಯೋತ್ಪಾದಕರು ಒಳನುಸುಳಲು ಯತ್ನಿಸುತ್ತಿದ್ದರು. ಅದನ್ನು ಗಮನಿಸಿದ ಭಾರತೀಯ ಸೇನೆ ಅವರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದೆ ಎಂದು ಹೇಳಿದ್ದಾರೆ.
ಭಯೋತ್ಪಾದಕರಿಂದ ಭದ್ರತಾ ಪಡೆಗಳು ಒಂದು ಎಕೆ 47, ಎರಡು ಮ್ಯಾಗಜೀನ್‌ಗಳು, 30 ರೌಂಡ್‌ಗಳು, ಎರಡು ಹ್ಯಾಂಡ್ ಗ್ರೆನೇಡ್‌ಗಳು ಮತ್ತು ಪಾಕಿಸ್ತಾನ ಮೂಲದ ಔಷಧಿ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ಭಾರತೀಯ ಸೇನೆ ಹೇಳಿಕೆಯಲ್ಲಿ ತಿಳಿಸಿದೆ.
ಗುಪ್ತಚರ ಇಲಾಖೆ ನೀಡಿದ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ಆರಂಭಿಸಿದ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.