ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ಬೈಕ್-ಟ್ಯಾಕ್ಸಿ ಅಗ್ರಿಗೇಟರ್ಗಳಾದ Rapido ಮತ್ತು Uber ಕಾರ್ಯನಿರ್ವಹಿಸಲು ಅನುಮತಿ ನೀಡಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.
ಹೈಕೋರ್ಟ್ ತೀರ್ಪಿನ ವಿರುದ್ಧ ದೆಹಲಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ರಾಜೇಶ್ ಬಿಂದಾಲ್ ಅವರ ರಜಾಕಾಲದ ಪೀಠ ನಡೆಸಿದೆ .
ದೆಹಲಿ ಸರ್ಕಾರವು ನೀತಿಯನ್ನು ರೂಪಿಸುವವರೆಗೆ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕು ಎಂದು ಕೋರಿ ಬೈಕ್-ಟ್ಯಾಕ್ಸಿ ಅಗ್ರಿಗೇಟರ್ಗಳು ಅರ್ಜಿ ಸಲ್ಲಿಸಿದ್ದರು. ಆದರೆ ಇದಕ್ಕೆ ದೆಹಲಿ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ಈ ಮೂಲಕ ದೆಹಲಿಯಲ್ಲಿ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿತ್ತು.
ಇದರ ವಿರುದ್ಧ ರಾಪಿಡೊ ಮತ್ತು ಉಬರ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದವು. ರಾಪಿಡೊ ಮತ್ತು ಉಬರ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮೇ 26 ರಂದು ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿ ಆದೇಶಿಸಿತ್ತು. ಅಲ್ಲದೆ ಅಂತಿಮ ನೀತಿಯನ್ನು ಪ್ರಕಟಿಸುವವರೆಗೆ ಬೈಕ್-ಟ್ಯಾಕ್ಸಿ ಅಗ್ರಿಗೇಟರ್ಗಳ ವಿರುದ್ಧ ಯಾವುದೇ ದಬ್ಬಾಳಿಕೆ ಕ್ರಮ ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್ ದೆಹಲಿ ಸರ್ಕಾರಕ್ಕೆ ಸೂಚಿಸಿತ್ತು.