ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿಯ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಕ್ರಮ ಪ್ರಶ್ನಿಸಿವಿದ್ಯಾರ್ಥಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಫೆಬ್ರವರಿ 8ಕ್ಕೆ ಮುಂದೂಡಿದೆ.
ವಿದ್ಯಾರ್ಥಿನಿ ರೇಷ್ಮಾ ಫಾರೂಕ್, ಇತರೆ ವಿದ್ಯಾರ್ಥಿನಿಯರ ಪೋಷಕರು ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳನ್ನು ಇಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ.
ವಿಚಾರಣೆಯಲ್ಲಿ ಸರ್ಕಾರದ ಪರ ವಕೀಲರು ಹಾಜರಾಗಿ, ಅಡ್ವೋಕೇಟ್ ಜನರಲ್ ವಾದ ಮಂಡಿಸಲಿದ್ದಾರೆ. ಅದಕ್ಕಾಗಿ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ವಿದ್ಯಾರ್ಥಿಗಳ ಪರ ವಕೀಲರು ವಾದಿಸಿ, ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಬೇಕು. ವಿದ್ಯಾರ್ಥಿನಿಯರನ್ನು ತರಗತಿಗೆ ಸೇರಿಸುತ್ತಿಲ್ಲ. ಇದರಿಂದ ಅವರ ಕಲಿಕೆಗೆ ಸಮಸ್ಯೆಯಾಗಿದೆ ಎಂದು ಕೋರಿದರು.
ವಾದ-ಪ್ರತಿವಾದ ಆಲಿಸಿದ ಪೀಠ, ಅರ್ಜಿ ಸಂಬಂಧ ವಿವರಣೆ ನೀಡಲು ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿತು.